ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶಯಗಳನ್ನು ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಒಕ್ಕೂಟದ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಸುಧೀರ ನಾಯರ್ ಹೇಳಿದರು.
ಬನವಾಸಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬನವಾಸಿ ವಲಯದ ವತಿಯಿಂದ ಆಯೋಜಿಸಿದ್ದ ಒಕ್ಕೂಟದ ಪದಾಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಸದಸ್ಯರನ್ನು ಒಗ್ಗೂಡಿಸುವುದು, ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸುವಂತೆ ಪ್ರೋತ್ಸಾಹಿಸುವುದು ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಒಕ್ಕೂಟದ ಪದಾಧಿಕಾರಿಗಳು ಮುಂಚೂಣಿಯಲ್ಲಿರಬೇಕು. ಮಹಿಳಾ ಸಬಲೀಕರಣ, ಕುಟುಂಬದ ಆರ್ಥಿಕ ಪ್ರಗತಿ, ಸ್ವಚ್ಛತೆ, ಆರೋಗ್ಯ, ಶಿಕ್ಷಣ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಯೋಜನಾಧಿಕಾರಿ ಮಂಜುನಾಥ ಎಸ್.ಜಿ. ಮಾತನಾಡಿ, ಒಕ್ಕೂಟದ ಪದಾಧಿಕಾರಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಕೈಗೊಳ್ಳಬಹುದಾದ ಸಮಾಜಮುಖಿ ಕಾರ್ಯಗಳ ಕುರಿತು ಚರ್ಚಿಸಲು ಕಾರ್ಯಾಗಾರ ಉತ್ತಮ ವೇದಿಕೆಯಾಗಿದೆ.
ಎಲ್ಲ ಸದಸ್ಯರ ಸಹಕಾರದೊಂದಿಗೆ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಕರೆ ನೀಡಿದರಲ್ಲದೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಬೀಬಿ ಆಯಿಷಾ ಖಾಸಿಂ ಖಾನ್, ಒಕ್ಕೂಟದ ಅಧ್ಯಕ್ಷರಾದ ಗಂಗಾ ಸಹವಾಸಿ ಹಾಗೂ ಸುನೀಲ್ ಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಸುನಂದಾ ನಾಯ್ಕ ನಿರೂಪಿಸಿದರು. ಸೇವಾ ಪ್ರತಿನಿಧಿ ಸವಿತಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಶಿವಾಜಿ ವಂದಿಸಿದರು.


