ಯಲ್ಲಾಪುರ: ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ, ಯಲ್ಲಾಪುರ ರಸ್ತೆ ತಡೆ ಸಂಚಾಲನಾ ಸಮಿತಿಯು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಭಾನುವಾರ ಮನವಿ ಸಲ್ಲಿಸಿತು.
ಬೇಡ್ತಿ ಹಾಗೂ ಅಘನಾಶಿನಿ ನದಿಗಳ ನೀರನ್ನು ತಿರುಗಿಸಿ ಬಯಲುಸೀಮೆಗೆ ಕೊಂಡೊಯ್ಯುವ ಬೃಹತ್ ನದಿ ಜೋಡಣೆ ಯೋಜನೆಗಳು ಈ ಭಾಗದ ಕೃಷಿ, ಪರಿಸರ, ಜಲಲಭ್ಯತೆ ಮತ್ತು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಜನಜೀವನ ಈಗಾಗಲೇ ಹಲವು ಬೃಹತ್ ಯೋಜನೆಗಳಿಂದ ಸಂಕಷ್ಟ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ವಿನಾಶಕಾರಿ ಯೋಜನೆಗಳನ್ನು ಪ್ರಸ್ತಾಪಿಸುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಯೋಜನೆಯನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಜಿಲ್ಲೆಯ ವಿವಿಧೆಡೆ ನಿರಂತರ ಹೋರಾಟ ನಡೆಯುತ್ತಿದೆ. ಜನಸಮಾವೇಶಗಳು, ಜನಜಾಗೃತಿ ಪಾದಯಾತ್ರೆಗಳು, ವಿಜ್ಞಾನಿಗಳ ವಿಚಾರಗೋಷ್ಠಿಗಳು, ಪತ್ರ ಚಳವಳಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಮುಖರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟವನ್ನು ಮುಂದುವರಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
ಪಕ್ಷ, ಜಾತಿ ಮತ್ತು ಧರ್ಮದ ಭೇದವಿಲ್ಲದೆ ಜಿಲ್ಲೆಯ ಜನರು ಈ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಆದರೂ ಯೋಜನೆಗಳ ಪ್ರಕ್ರಿಯೆ ಮುಂದುವರಿದಿದ್ದು, ಬೇಡ್ತಿ (ಗಂಗಾವಳಿ)–ವರದಾ ನದಿ ತಿರುವು ಯೋಜನೆಯು ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಹಂತ ತಲುಪಿದೆ. ಯೋಜನೆಯ ಸ್ಥಳ ಸಮೀಕ್ಷೆ ನಡೆಸಲು ಖಾಸಗಿ ಕಂಪನಿಯೊಂದಕ್ಕೆ ಟೆಂಡರ್ ಕೂಡ ನೀಡಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲೆಯ ಜನರ ಬದುಕು, ಕೃಷಿ ಮತ್ತು ಪರಿಸರದ ಉಳಿವಿನ ಪ್ರಶ್ನೆ ಎದುರಾಗಿರುವ ಹಿನ್ನೆಲೆಯಲ್ಲಿ, ನವೆಂಬರ್ 3ರಂದು ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಯೋಜನೆಯ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಲು ಸಮಿತಿ ನಿರ್ಧರಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಸ್ಥಳಕ್ಕೆ ಕಳುಹಿಸಿ, ಯೋಜನೆ ಸ್ಥಗಿತಗೊಳಿಸುವ ಕುರಿತು ಸ್ಪಷ್ಟ ಹಾಗೂ ಸಕಾರಾತ್ಮಕ ಭರವಸೆ ನೀಡಲು ಸಚಿವರು ಮುತುವರ್ಜಿ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.
ಯೋಜನೆಯಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಮನವರಿಕೆ ಮಾಡಿಕೊಟ್ಟು, ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.
ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟದ ಕುರಿತು ಸಮಿತಿ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ ಅವರು ಸಚಿವರಿಗೆ ಮನವಿ ಸಲ್ಲಿಸಿ ವಿವರಿಸಿದರು. ಸಮಿತಿಯ ಪ್ರಧಾನ ಸಂಚಾಲಕ ಹರಿಪ್ರಕಾಶ ಕೋಣೆಮನೆ, ಸಂಚಾಲಕರಾದ ನರಸಿಂಹ ಸಾತೊಡ್ಡಿ, ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ವಿ.ಟಿ. ಹೆಗಡೆ, ವೆಂಕಟರಮಣ ಭಟ್ಟ ಕಿರಕುಂಭತ್ತಿ, ರಾಘವೇಂದ್ರ ಭಟ್ಟ ಹಾಸಣಗಿ, ಕೆ.ಟಿ. ಹೆಗಡೆ, ನಾಗರಾಜ ಕವಡಿಕೆರೆ, ಸುಬ್ಬಣ್ಣ ಉದ್ದಾಬೈಲ್, ರಘುಪತಿ ಹೆಗಡೆ ಕಂಪ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


