Monday, September 7, 2026
Join WhatsApp Group
HomeCrime13 ವರ್ಷಗಳ ಕಣ್ಣಾಮುಚ್ಚಾಲೆ ಅಂತ್ಯ!

13 ವರ್ಷಗಳ ಕಣ್ಣಾಮುಚ್ಚಾಲೆ ಅಂತ್ಯ!

ಹಳಿಯಾಳ: ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಹಳಿಯಾಳ ಪೊಲೀಸರು ತೆಲಂಗಾಣ ರಾಜ್ಯದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2014ರಲ್ಲಿ ಹಳಿಯಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಲಾರಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದಲ್ಲಿ ಆರು ಆರೋಪಿಗಳನ್ನು ಬಂಧಿಸಿ, ಕಳುವಾದ ಸ್ವತ್ತುಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು.

ಪ್ರಕರಣದ ಎ-5 ಆರೋಪಿ ಮಧು ಯುವರಾಜ್ ಐಹೊಳೆ, ಮೂಲತಃ ಬೆಳಗಾವಿ ಜಿಲ್ಲೆಯ ಕುಡಚಿ ನಿವಾಸಿಯಾಗಿದ್ದು, 2014ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿತ್ತು.

ಆರೋಪಿಯ ಪತ್ತೆಗಾಗಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದ ಮೇಲೆ ಜೂನ್ 13ರಂದು ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ರಂಗಾ ರೆಡ್ಡಿ ಜಿಲ್ಲೆಯ ಬಂದ್ ಮೈಲಾರಂ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಧು ಯುವರಾಜ್ ಐಹೊಳೆ ಅಂತರ್‌ಜಿಲ್ಲಾ ಅಪರಾಧಿಯಾಗಿದ್ದು, ಬೆಳಗಾವಿ ಜಿಲ್ಲೆಯ ನಂದಗಡ ಹಾಗೂ ಮಾಳಮಾರುತಿ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಹಾಗೂ ಡಿಎಸ್ಪಿ ಶಿವಾನಂದ ಮದರಕಂಡಿ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಜಯಪಾಲ್ ಪಾಟೀಲ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪಿಎಸ್‌ಐಗಳಾದ ಬಸವರಾಜ ಮಬನೂರ, ಕೃಷ್ಣಾ ಅರಕೇರಿ, ಎಎಸ್‌ಐ ವೆಂಕಟೇಶ್ ತೆಗ್ಗಿನ, ಸಿಎಚ್‌ಸಿ ಬಸವರಾಜ್ ಹಗರಿ ಹಾಗೂ ಸಿಬ್ಬಂದಿಗಳಾದ ಶ್ರೀಶೈಲ್ ಜಿ.ಎಂ., ಲಕ್ಷ್ಮಣ ಪೂಜಾರಿ, ವಿನೋದ್ ಜಿ.ಬಿ. ಮತ್ತು ರಾಘವೇಂದ್ರ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು.

ಪ್ರಕರಣದ ತನಿಖೆ ಹಾಗೂ ಆರೋಪಿಯ ಬಂಧನದಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇಲಾಖೆ ಅಭಿನಂದಿಸಿ ಪ್ರಶಂಸಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share