Friday, July 24, 2026
Join WhatsApp Group
HomeLocal Newsಸೌಲಭ್ಯಗಳ ಪಾರದರ್ಶಕ ವಿತರಣೆಯಾಗಲಿ

ಸೌಲಭ್ಯಗಳ ಪಾರದರ್ಶಕ ವಿತರಣೆಯಾಗಲಿ

ಕಾರವಾರ: ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಎಲೆಕ್ಟ್ರಿಕ್ ಆಟೋ, ತ್ರಿಚಕ್ರ ವಾಹನ ಹಾಗೂ ಸಿಂಟೆಕ್ಸ್‌ಗಳ ವಿತರಣೆಯಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ನಿಜವಾದ ಅರ್ಹ ಫಲಾನುಭವಿಗಳಿಗೇ ಸೌಲಭ್ಯ ತಲುಪಬೇಕು ಎಂದು ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವರ್‌ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಸಭೆ ಆವರಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಎಲೆಕ್ಟ್ರಿಕ್ ಆಟೋ, ತ್ರಿಚಕ್ರ ವಾಹನ ಮತ್ತು ಸಿಂಟೆಕ್ಸ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಈ ಹಿಂದೆ ಇದೇ ರೀತಿಯ ಸೌಲಭ್ಯ ಪಡೆದಿರುವವರಿದ್ದರೆ, ಅವರ ಮಾಹಿತಿಯನ್ನು ಆರ್‌ಟಿಒ ಮೂಲಕ ಪರಿಶೀಲಿಸಿ ಪೌರಾಯುಕ್ತರಿಗೆ ಸಲ್ಲಿಸಬೇಕು. ಈಗಾಗಲೇ ಸೌಲಭ್ಯ ಪಡೆದಿರುವುದು ದೃಢಪಟ್ಟರೆ ವಾಹನವನ್ನು ಹಿಂಪಡೆಯಲಾಗುವುದು ಎಂದು ಎಚ್ಚರಿಸಿದರು.

ನಗರದ ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಶಾಶ್ವತ ಪರಿಹಾರದ ಭಾಗವಾಗಿ 300 ಅರ್ಹ ಫಲಾನುಭವಿಗಳನ್ನು ಗುರುತಿಸಿ 965 ಸಿಂಟೆಕ್ಸ್ ಟ್ಯಾಂಕ್‌ಗಳನ್ನು ತರಿಸಲಾಗಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮುಂದುವರಿದಿದ್ದು, ಈಗಾಗಲೇ ಅತ್ಯಾಧುನಿಕ ಟ್ರಾಮಾ ಸೆಂಟರ್ ಹಾಗೂ ಕ್ಯಾನ್ಸರ್ ಬಂಕರ್ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಉಚಿತ ಪ್ಯಾಪ್ ಟೆಸ್ಟ್ ಹಾಗೂ ಮ್ಯಾಮೊಗ್ರಫಿ ತಪಾಸಣೆಗಳನ್ನು ನಿಯಮಿತವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಕೆರವಡಿ ಸೇತುವೆ ಕಾಮಗಾರಿ ಮುಂದಿನ ಆರು ತಿಂಗಳೊಳಗೆ ಆರಂಭವಾಗಲಿದೆ ಎಂದೂ ಶಾಸಕರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಡಿ. ಉಳ್ವೇಕರ್ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಾದ ವಿಶೇಷ ಅನುದಾನದಡಿ ಈ ಯೋಜನೆ ಜಾರಿಗೊಂಡಿದ್ದು, ಫಲಾನುಭವಿಗಳು ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತು ಜಾಗೃತಿ ಮೂಡಿಸಲಾಯಿತು. 2025-26ರ ಎಸ್‌ಎಫ್‌ಸಿ ಯೋಜನೆಯಡಿ ಆಶಾ ನಿಕೇತನದ ಕಿವುಡ ಹಾಗೂ ಮೂಕ ವಿಕಲಚೇತನ ವಸತಿ ಶಾಲೆಗೆ ಪೀಠೋಪಕರಣಗಳನ್ನೂ ವಿತರಿಸಲಾಯಿತು.

ನಗರಸಭೆ ಪೌರಾಯುಕ್ತ ಜಗದೀಶ ಹುಲಗಜ್ಜಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಸದಾನಂದ ಸಾಳೇಹಿತ್ತಲ್, ನಾರಾಯಣ ನಾಯಕ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಮತ್ತು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share