ಶಿರಸಿ: ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿ, ಡಿಪಿಆರ್ ಸಿದ್ಧಪಡಿಸುವ ಪ್ರಕ್ರಿಯೆಗೆ ಮುಂದಾಗಿರುವ ಕುರಿತು ಜಿಲ್ಲೆಯ ಕಾಂಗ್ರೆಸ್ ಶಾಸಕರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಶಿರಸಿಯಲ್ಲಿ ನಡೆದ ಸಮಾವೇಶ ಹಾಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ನದಿ ತಿರುವು ಯೋಜನೆ ವಿರೋಧಿ ಧರಣಿಯಲ್ಲಿ ಸ್ಥಳೀಯ ಕಾಂಗ್ರೆಸ್ ಶಾಸಕರು ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿದ್ದರು.
ಸಾರ್ವಜನಿಕ ವೇದಿಕೆಗಳಲ್ಲಿ ಯೋಜನೆಗೆ ವಿರೋಧ ವ್ಯಕ್ತಪಡಿಸುವ ಶಾಸಕರು, ಸರ್ಕಾರದ ಮಟ್ಟದಲ್ಲಿಯೂ ಅದೇ ನಿಲುವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ.
ಜಿಲ್ಲೆಯ ಸಂಸದರು ಮತ್ತು ಶಾಸಕರು ಈಗಾಗಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ನದಿ ತಿರುವು ಯೋಜನೆ ಜಾರಿಗೊಳಿಸದಂತೆ ಮನವಿ ಸಲ್ಲಿಸಿ, ಅದರ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದಾಗಿ ತಿಳಿಸಿ, ಡಿಪಿಆರ್ ಸಿದ್ಧಪಡಿಸುವಂತೆ ಒತ್ತಾಯಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಅನಂತಮೂರ್ತಿ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿಗಳ ಈ ನಿಲುವಿನ ಕುರಿತು ಜಿಲ್ಲೆಯ ಕಾಂಗ್ರೆಸ್ ಶಾಸಕರು ಈವರೆಗೆ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸದಿರುವುದನ್ನು ಪ್ರಶ್ನಿಸಿರುವ ಅವರು, ಜನರ ಮುಂದೆ ಯೋಜನೆಯನ್ನು ವಿರೋಧಿಸುವವರು ಸರ್ಕಾರದ ಮಟ್ಟದಲ್ಲಿಯೂ ತಮ್ಮ ನಿಲುವನ್ನು ದೃಢವಾಗಿ ಮಂಡಿಸಬೇಕು ಎಂದಿದ್ದಾರೆ.
ಸಾರ್ವಜನಿಕ ವೇದಿಕೆಯಲ್ಲಿ ಒಂದು ನಿಲುವು, ಸರ್ಕಾರದ ಮುಂದೆ ಮತ್ತೊಂದು ನಿಲುವು ಅನುಸರಿಸಿದರೆ ಜನರ ವಿಶ್ವಾಸಕ್ಕೆ ಧಕ್ಕೆಯಾಗಬಹುದು ಎಂದು ಅವರು ಹೇಳಿದ್ದಾರೆ.ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ.
ಹೀಗಾಗಿ, ಜಿಲ್ಲೆಯ ಜನಜೀವನ, ಪರಿಸರ ಹಾಗೂ ನದಿ ಕಣಿವೆಯ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆಯಿರುವ ಯೋಜನೆಯ ವಿರುದ್ಧ ಶಾಸಕರು ಧ್ವನಿ ಎತ್ತಬೇಕು. ಯಾವುದೇ ಕಾರಣಕ್ಕೂ ಡಿಪಿಆರ್ ಸಿದ್ಧಪಡಿಸುವ ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ ಶಾಸಕರು ಮೌನ ಬದಿಗಿಟ್ಟು, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಯ ಕುರಿತು ಸರ್ಕಾರದ ಮಟ್ಟದಲ್ಲಿ ತಮ್ಮ ಆಕ್ಷೇಪ ದಾಖಲಿಸಬೇಕು. ಜನರ ಆತಂಕವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಯೋಜನೆಯ ಮುಂದಿನ ಪ್ರಕ್ರಿಯೆ ಸ್ಥಗಿತಗೊಳ್ಳುವಂತೆ ಒತ್ತಡ ಹೇರಬೇಕು ಎಂದು ಅನಂತಮೂರ್ತಿ ಹೆಗಡೆ ಒತ್ತಾಯಿಸಿದ್ದಾರೆ.


