Monday, September 7, 2026
Join WhatsApp Group
HomeLocal Newsರೈತರಿಗೆ ಅನ್ಯಾಯವಾಗಲು ಬಿಡಲ್ಲ; ಅನಂತಮೂರ್ತಿ ಹೆಗಡೆ

ರೈತರಿಗೆ ಅನ್ಯಾಯವಾಗಲು ಬಿಡಲ್ಲ; ಅನಂತಮೂರ್ತಿ ಹೆಗಡೆ

ಶಿರಸಿ: ʻಗಲ್ಲು ಶಿಕ್ಷೆಗೆ ಒಳಪಟ್ಟ ವ್ಯಕ್ತಿಗೂ ತನ್ನ ಕೊನೆಯ ಆಸೆಯನ್ನು ಹೇಳಲು ಅವಕಾಶವಿದೆ. ಆದರೆ ರೈತರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡದೆ, ಬೆಳಗಿನ ಜಾವವೇ ಅರಣ್ಯ ಇಲಾಖೆ ಆಕ್ರಮಣಕಾರಿಯಾಗಿ ಬಂದು ಜಮೀನು ವಶಪಡಿಸಿಕೊಂಡು ಗಿಡಗಳನ್ನು ನೆಡುತ್ತಿರುವುದು ಯಾವ ನ್ಯಾಯ?ʼ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.

ಗೋಳಿಕಟ್ಟಾ ಗ್ರಾಮದ ಕಾಮಧೇನು ಹಾಲು ಮತ್ತು ಹಣ್ಣು ಸಂಸ್ಕರಣಾ ಸಂಸ್ಥೆಗೆ ಸೇರಿದ ಜಾಗದಲ್ಲಿ ರೈತರು ಬೆಳೆಯುತ್ತಿದ್ದ ಬೆಳೆಗಳನ್ನು ತೆರವುಗೊಳಿಸಿ ಅರಣ್ಯ ಇಲಾಖೆ ಜಾಗ ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ರೈತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.

ಇಲ್ಲಿ ಭತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಜೀವನ ನಡೆಸುತ್ತಿರುವ ರೈತರು ಪಾಕಿಸ್ತಾನದಿಂದ ಬಂದವರಲ್ಲ, ಬಾಂಗ್ಲಾದೇಶದವರೂ ಅಲ್ಲ. ಅವರೆಲ್ಲರೂ ಭಾರತೀಯರು. ಸರ್ಕಾರ ಅವರಿಗೆ ಮತದಾನದ ಹಕ್ಕು ನೀಡಿದೆ. ರೈತರು ಸರ್ಕಾರಕ್ಕೆ ಕಂದಾಯವನ್ನೂ ಪಾವತಿಸುತ್ತಿದ್ದಾರೆ. ಹೀಗಿರುವಾಗ ಅವರ ಮೇಲೆ ಈ ರೀತಿಯ ದೌರ್ಜನ್ಯ ನಡೆಸುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ ಅವರು, ಈ ಕ್ರಮದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆಯೂ ಸಂಶಯ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಜಾಗದ ಕುರಿತು ನ್ಯಾಯಾಲಯ ನೀಡಿರುವ ಆದೇಶವನ್ನು ಗೌರವಿಸಬೇಕು. ಆದರೆ ಜಾಗವನ್ನು ಖಾಲಿ ಮಾಡಿಸಲು ಅಥವಾ ಸರ್ಕಾರದ ವಶಕ್ಕೆ ಪಡೆಯಲು ಕಾನೂನಿನಲ್ಲಿ ನಿರ್ದಿಷ್ಟ ಪ್ರಕ್ರಿಯೆಗಳಿವೆ. ಸಂಬಂಧಪಟ್ಟವರಿಗೆ ಕಾಲಾವಕಾಶ ನೀಡುವುದು, ಆದೇಶದ ಬಗ್ಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡುವುದು ಅಗತ್ಯ. ಆದರೆ ತಡರಾತ್ರಿ ಇಂಗ್ಲಿಷ್‌ನಲ್ಲಿರುವ 20 ಪುಟಗಳ ಆದೇಶದ ಪ್ರತಿಯನ್ನು ನೀಡಿ, ಮರುದಿನ ಮುಂಜಾನೆ 5 ಗಂಟೆಗೆ ಜೆಸಿಬಿ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಬರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದರು.

ಅರಣ್ಯ ಇಲಾಖೆಯ ಈ ಕ್ರಮ ಖಂಡನೀಯವಾಗಿದ್ದು, ರೈತರ ಮೇಲೆ ಉದ್ದೇಶಪೂರ್ವಕವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎನ್ನುವ ಭಾವನೆ ಮೂಡುತ್ತಿದೆ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಅನಂತಮೂರ್ತಿ ಹೆಗಡೆ ಹೇಳಿದರು.

ಕಳೆದ 65 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ರೈತರನ್ನು ಸರ್ಕಾರ ಗುರುತಿಸಿ, ಸಾಧ್ಯವಾದಷ್ಟು ಭೂಮಿಯನ್ನು ಮಂಜೂರು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಏಕಾಏಕಿ ರೈತರನ್ನು ಒಕ್ಕಲೆಬ್ಬಿಸಿದರೆ ಅವರ ಬದುಕು ಅತಂತ್ರವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವರು ಆತ್ಮಹತ್ಯೆಯಂತಹ ತೀವ್ರ ನಿರ್ಧಾರಕ್ಕೆ ಹೋಗುವ ಅಪಾಯವಿದ್ದು, ಸರ್ಕಾರ ಕೂಡಲೇ ರೈತರ ಪರವಾಗಿ ನಿಲ್ಲಬೇಕು ಎಂದು ಅವರು ಒತ್ತಾಯಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share