Monday, September 7, 2026
Join WhatsApp Group
HomeLocal Newsಬನವಾಸಿ | ಬಾಲಕಿಯರ ವಸತಿ ನಿಲಯಕ್ಕೆ 5 ಕೋಟಿ ರೂ ಅನುದಾನ

ಬನವಾಸಿ | ಬಾಲಕಿಯರ ವಸತಿ ನಿಲಯಕ್ಕೆ 5 ಕೋಟಿ ರೂ ಅನುದಾನ

ಶಾಸಕ ಶಿವರಾಮ ಹೆಬ್ಬಾರ್ ಪ್ರಯತ್ನಕ್ಕೆ ಫಲ

ಕೆನರಾ ನೆಕ್ಸ್ಟ್‌ ನ್ಯೂಸ್‌ ಡೆಸ್ಕ್‌

ಬನವಾಸಿ: ಬನವಾಸಿಯಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂ ವಿಶೇಷ ಅನುದಾನ ಮಂಜೂರಾಗಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಮತ್ತಷ್ಟು ಬಲ ನೀಡಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ವಸತಿ ಸೌಲಭ್ಯದ ಕೊರತೆಯಿಂದ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬನವಾಸಿಯಲ್ಲಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಈ ಹಿಂದೆಯೇ ಮಂಜೂರು ಮಾಡಿಸಲಾಗಿತ್ತು. ಇದೀಗ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 5 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿರುವುದಾಗಿ ಶಾಸಕರು ತಿಳಿಸಿದ್ದಾರೆ.

ವಸತಿ ನಿಲಯ ನಿರ್ಮಾಣಗೊಂಡ ಬಳಿಕ ಬನವಾಸಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ 300ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಹಾಗೂ ಶೈಕ್ಷಣಿಕ ಸೌಲಭ್ಯ ದೊರೆಯಲಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿನಿಯರಿಗೆ ತಮ್ಮ ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಲು ಈ ವಸತಿ ನಿಲಯ ನೆರವಾಗಲಿದೆ.

ಗ್ರಾಮೀಣ ಭಾಗದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಈ ಯೋಜನೆಯು ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಯ ಜತೆಗೆ ಅವರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕೂ ಸಹಕಾರಿಯಾಗಲಿದೆ. ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ.

ಅನುದಾನ ಮಂಜೂರಾಗಿರುವ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಸಕ ಶಿವರಾಮ ಹೆಬ್ಬಾರ್, ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ 5 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ.

ಬನವಾಸಿಯಲ್ಲಿ ನಿರ್ಮಾಣವಾಗಲಿರುವ ಈ ವಸತಿ ನಿಲಯವು ಕೇವಲ ಕಟ್ಟಡವಾಗದೆ, ಗ್ರಾಮೀಣ ಭಾಗದ ನೂರಾರು ಹೆಣ್ಣುಮಕ್ಕಳ ಉನ್ನತ ಶಿಕ್ಷಣದ ಕನಸಿಗೆ ನೆಲೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share