ಬನವಾಸಿ: ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಉಂಟುಮಾಡುವುದಲ್ಲದೆ, ಅಪರಾಧ ಚಟುವಟಿಕೆಗಳಿಗೂ ದಾರಿಮಾಡಿಕೊಡುತ್ತದೆ ಎಂದು ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಾಂತೇಶ ಕುಂಬಾರ ಹೇಳಿದರು.
ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್), ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಾಗೂ ‘ಸ್ವಾಸ್ಥ್ಯ ಸಂಕಲ್ಪ’ ಆನ್‌ಲೈನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಇಂತಹ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಡ್ರಗ್ಸ್‌ನಂತಹ ಮಾರಕ ವ್ಯಸನಗಳಿಂದ ಯುವಕರನ್ನು ರಕ್ಷಿಸುವುದೇ ಮುಖ್ಯ ಉದ್ದೇಶವಾಗಿದ್ದು, ಮಾದಕ ವಸ್ತುಗಳ ಮಾರಾಟ, ಸಾಗಣೆ ಅಥವಾ ಬಳಕೆಯ ಬಗ್ಗೆ ಮಾಹಿತಿ ದೊರೆತರೆ ತಕ್ಷಣವೇ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಮಾಹಿತಿ ನೀಡಿ, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ಅಕ್ಕಿವಳ್ಳಿ ಮಾತನಾಡಿ, ಮಕ್ಕಳು ದೇಶದ ಆಸ್ತಿಯಾಗಿದ್ದು, ವ್ಯಸನವು ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ. ಯುವಜನತೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಸಂಘಟನಾ ಉಪಾಧ್ಯಕ್ಷ ಸುಧೀರ ನಾಯರ್ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆ ಹಾಗೂ ಉತ್ತಮ ಜೀವನಶೈಲಿಯತ್ತ ಗಮನಹರಿಸಬೇಕು ಎಂಬುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿಯರಾದ ಪ್ರಭಾವತಿ ನಾಯ್ಕ್, ಶೋಭ ಮೊಗೇರ ಉಪಸ್ಥಿತರಿದ್ದರು. ರಾಜ್ಯಾದ್ಯಂತ ನಡೆದ ಆನ್‌ಲೈನ್ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ಹೆಗ್ಗಡೆ, ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಬೆಂಗಳೂರು ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ ಪ್ರಸನ್ನ ಸೇರಿದಂತೆ ವಿವಿಧ ಸಂಪನ್ಮೂಲ ವ್ಯಕ್ತಿಗಳ ಉಪನ್ಯಾಸಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.
ವಲಯ ಮೇಲ್ವಿಚಾರಕಿ ಸುನಂದಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸೇವಾ ಪ್ರತಿನಿಧಿ ವೀಣಾ ವಂದಿಸಿದರು.