ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲರಿಗೆ ಸಂಸದ ಕಾಗೇರಿ ಮನವಿ
ನವದೆಹಲಿ/ಕಾರವಾರ: ಪ್ರಸ್ತಾಪಿತ ಬೇಡ್ತಿ–ಹಿರೆವಡ್ಡಟ್ಟಿ ನದಿ ಜೋಡಣೆ ಯೋಜನೆಗೆ ಕರ್ನಾಟಕ ಸರ್ಕಾರವು ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸಲು ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ ಯೋಜನೆ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಕಾಗೇರಿ, ಕರ್ನಾಟಕ ಸರ್ಕಾರವು ಡಿಪಿಆರ್ ಸಿದ್ಧಪಡಿಸಲು ನೀಡಿರುವ ಅನುಮತಿ ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟರು.
ಉತ್ತರ ಕನ್ನಡ ಜಿಲ್ಲೆಯು ಪಶ್ಚಿಮ ಘಟ್ಟಗಳ ಅತ್ಯಂತ ಸೂಕ್ಷ್ಮ ಪರಿಸರ ವಲಯದಲ್ಲಿದ್ದು, ಜಿಲ್ಲೆಯ ಧಾರಣ ಸಾಮರ್ಥ್ಯ (Carrying Capacity) ಕುರಿತು ಸಮಗ್ರ ವೈಜ್ಞಾನಿಕ ಅಧ್ಯಯನ ನಡೆಸಿದ ಬಳಿಕವೇ ಇಂತಹ ಯೋಜನೆಗಳ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲೆಯ ಪರಿಸರ ಮತ್ತು ಧಾರಣ ಸಾಮರ್ಥ್ಯದ ಕುರಿತು ಅಧ್ಯಯನ ನಡೆಸದೆ ಯೋಜನೆಯನ್ನು ಮುಂದುವರಿಸುವುದು ತೀವ್ರ ಆತಂಕಕಾರಿ ವಿಷಯವಾಗಿದೆ. ಆದ್ದರಿಂದ ಪ್ರಸ್ತುತ ಆರಂಭವಾಗಿರುವ ಡಿಪಿಆರ್ ತಯಾರಿಕೆ ಸೇರಿದಂತೆ ಯೋಜನೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಕಾಗೇರಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಪರಿಸರ ಸಂರಕ್ಷಣೆ ಹಾಗೂ ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.