Ad
Home Crime ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ಆರೋಪ; ಪೊಲೀಸ್ ತನಿಖೆ ಚುರುಕು

ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ಆರೋಪ; ಪೊಲೀಸ್ ತನಿಖೆ ಚುರುಕು

0
3

ಭಟ್ಕಳ: ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ಭಟ್ಕಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಗುಳ್ಮಿ ರೈಲು ನಿಲ್ದಾಣ ರಸ್ತೆಯಲ್ಲಿರುವ ಮದರಸಾ ಹಾಗೂ ಮಸೀದಿ ಸಮೀಪ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ತಲಾಂಡ್ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಗಣೇಶ ಮೂರ್ತಿಯ ಮೆರವಣಿಗೆ ಸೆ.16ರಂದು ರಾತ್ರಿ ಸುಮಾರು 8.20ಕ್ಕೆ ತಲಾಂಡ್‌ನಿಂದ ಆರಂಭವಾಗಿತ್ತು. ಗುಲ್ಮಿ ರೈಲ್ವೆ ಸೇತುವೆ ದಾಟಿದ ಬಳಿಕ ಮೆರವಣಿಗೆ ಮದರಸಾ ಹಾಗೂ ರೈಲು ನಿಲ್ದಾಣ ರಸ್ತೆಯ ಕಡೆಗೆ ಸಾಗಿತ್ತು.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಸಂಕಪ್ಪ ನಾಯ್ಕ ನೀಡಿರುವ ದೂರಿನ ಪ್ರಕಾರ, ರಾತ್ರಿ ಸುಮಾರು 9.30ರ ವೇಳೆಗೆ ರಾಮಚಂದ್ರ ನಾಯ್ಕ ಅವರಿಗೆ ಸೇರಿದ ಕಟ್ಟಡದ ಮೇಲ್ಭಾಗದಿಂದ ಅಪರಿಚಿತ ವ್ಯಕ್ತಿಗಳು ಗಣೇಶ ಮೂರ್ತಿಯ ಮೇಲೆ ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮೆರವಣಿಗೆಯಲ್ಲಿ ಗೊಂದಲ ಉಂಟಾಗಿದ್ದು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ಘಟನೆಗೆ ಸಂಬಂಧಿಸಿದಂತೆ ಬಂದರ್ ರೋಡ್ 5ನೇ ಕ್ರಾಸ್ ನಿವಾಸಿ ಅಬ್ದುಲ್ ಅಲೀಂ (67) ಹಾಗೂ ಶಾಹುಲ್ ಅಮೀನ್ ಗವಾಯಿ ಅವರು ಪ್ರತ್ಯೇಕ ದೂರು ನೀಡಿದ್ದಾರೆ. ಅವರ ದೂರಿನ ಪ್ರಕಾರ, ರಾತ್ರಿ ಸುಮಾರು 9.45ರ ವೇಳೆಗೆ ಗುಳ್ಮಿ ರೈಲ್ವೆ ಸೇತುವೆ ದಾಟಿ ಮೆರವಣಿಗೆ ರೈಲು ನಿಲ್ದಾಣ ರಸ್ತೆಯಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಅದೇ ಕಟ್ಟಡದ ಮೊದಲ ಮಹಡಿಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಮೀಯಾ ಮಸೀದಿ ಹಾಗೂ ಕೆಳಮಹಡಿಯಲ್ಲಿರುವ ತಾಜುಸ್ಸುನ್ನಾ ಅರೇಬಿಕ್ ಮದರಸಾ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ಬಳಿಕ ಮುನ್ನೆಚ್ಚರಿಕೆ ಹಾಗೂ ಆರೋಪಿತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಮಂದಿ ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ, ಕಲ್ಲು ತೂರಾಟ ನಡೆಸಿದವರನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೆಲ ಸದಸ್ಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಎರಡೂ ದೂರುಗಳ ಆಧಾರದ ಮೇಲೆ ಘಟನೆ ನಡೆದ ಸಂದರ್ಭ, ಕಲ್ಲು ತೂರಾಟದ ನಿಖರ ಹಿನ್ನೆಲೆ ಹಾಗೂ ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಎಎಸ್ಪಿ ರಾನು ಗುಪ್ತಾ, ಸಿಪಿಐ ದಿವಾಕರ್ ಪಿ.ಎಂ. ಹಾಗೂ ಪಿಎಸ್ಐ ನವೀನ್ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಲಭ್ಯವಿರುವ ಇತರೆ ಸಾಕ್ಷ್ಯಗಳನ್ನೂ ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣವೇನು ಹಾಗೂ ಕಲ್ಲು ತೂರಾಟದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!