ಭಟ್ಕಳ: ಅಕ್ರಮವಾಗಿ ಮದ್ಯ ಸಾಗಾಟ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿ, ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಭಟ್ಕಳದ ಗಾಂಧಿನಗರದ ರಾಮಚಂದ್ರ ನಾರಾಯಣ ಮೋಗೇರ (55) ಎಂದು ಗುರುತಿಸಲಾಗಿದೆ.
ಆರೋಪಿಯು ಭಟ್ಕಳ ತಾಲೂಕಿನ ತೆಂಗಿನಗುಂಡಿ ಕಡೆಯಿಂದ ಬಂದರು ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿರುವ ಗೂಡಂಗಡಿಯ ಎದುರು ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಸರಾಯಿ ಸಾಚೆಟ್‌ಗಳನ್ನು ಸಾಗಾಟ ಮಾಡಿ ತನ್ನ ವಶದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ.
ಈ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೊರಾಣಿ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಸುಮಾರು 8.30ರ ವೇಳೆಗೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ 2,970 ರೂ. ಮೌಲ್ಯದ 4.860 ಲೀಟರ್ ಅಕ್ರಮ ಸರಾಯಿ ಸಾಚೆಟ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.