ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಆರೋಪದಡಿ 27 ವರ್ಷದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಗಳಿಹೊಂಡ, ಪುರವರ್ಗದ ನಿವಾಸಿ ಅಬ್ದುಲ್ ಆಲೀಮ ಸಲಾವುದ್ದೀನ ಜಬಾಲಿ (27) ಪ್ರಕರಣದ ಆರೋಪಿಯಾಗಿದ್ದಾನೆ.
ಪೊಲೀಸ್ ದೂರಿನ ಪ್ರಕಾರ, ಸೆಪ್ಟೆಂಬರ್ 4ರಂದು ರಾತ್ರಿ ಸುಮಾರು 9 ಗಂಟೆ ವೇಳೆಗೆ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ಹಾವಳಿಕಂಠ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್ ಆಲೀಮ ಯಾವುದೋ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಈ ವೇಳೆ ಆತನನ್ನು ಮಾತನಾಡಿಸಿದಾಗ ಬಾಯಿಯಿಂದ ಗಾಂಜಾ ಸೇವನೆಯ ಘಾಟು ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ತಾನು ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಆತನನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸೆಪ್ಟೆಂಬರ್ 5ರಂದು ಪಡೆದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ (ತನಿಖೆ) ಭರಮಪ್ಪ ಬೆಳಗಲಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದಾರೆ.