Friday, July 24, 2026
Join WhatsApp Group
HomeLocal Newsಡಾ. ಶ್ಯಾಮಪ್ರಸಾದ ಮುಖರ್ಜಿ ತ್ಯಾಗ ಯುವಕರಿಗೆ ಆದರ್ಶ: ಕಾಗೇರಿ

ಡಾ. ಶ್ಯಾಮಪ್ರಸಾದ ಮುಖರ್ಜಿ ತ್ಯಾಗ ಯುವಕರಿಗೆ ಆದರ್ಶ: ಕಾಗೇರಿ

ಶಿರಸಿ: ರಾಜ್ಯ ಕಾಂಗ್ರೆಸ್ ಸರ್ಕಾರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ. ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕಾದವರು ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿರುವುದು ಜನರಿಗೆ ಅನ್ಯಾಯವಾಗಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ 125ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಶಿರಸಿಯ ದೀನದಯಾಳ ಭವನದಲ್ಲಿ ಬುಧವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಿರೋಧಿಸಿ ಹೋರಾಟ ನಡೆಸಿದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ತ್ಯಾಗ ಮತ್ತು ಬಲಿದಾನ ದೇಶದ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಕಾಗೇರಿ ಹೇಳಿದರು.

ಮುಖ್ಯ ವಕ್ತಾರರಾಗಿ ಪಾಲ್ಗೊಂಡ ಖ್ಯಾತ ವಾಗ್ಮಿ ಹಾಗೂ ಸಂವಿಧಾನ ಫೌಂಡೇಶನ್ ಸಂಸ್ಥಾಪಕ ಪ್ರಕಾಶ್ ಮಲ್ಪೆ ಮಾತನಾಡಿ, ದೇಶ ವಿಭಜನೆಯ ಸಂದರ್ಭದಲ್ಲಿ ಭಾರತದ ಹಿತಾಸಕ್ತಿಗಾಗಿ ಡಾ. ಶ್ಯಾಮಪ್ರಸಾದ ಮುಖರ್ಜಿ ನಡೆಸಿದ ಹೋರಾಟವನ್ನು ವಿವರಿಸಿ, ಡಾ. ಮುಖರ್ಜಿಯವರ ನೇತೃತ್ವದ ಜನಾಂದೋಲನದಿಂದ ಪಂಜಾಬ್ ಹಾಗೂ ಬಂಗಾಳದ ಹಲವು ಪ್ರದೇಶಗಳು ಭಾರತದಲ್ಲೇ ಉಳಿಯುವಂತಾಯಿತು ಎಂದು ಹೇಳಿದರು.

ಅತ್ಯಂತ ಪ್ರತಿಭಾವಂತರಾಗಿದ್ದ ಡಾ. ಮುಖರ್ಜಿ ಶಿಕ್ಷಣ ಕ್ಷೇತ್ರದಲ್ಲಿ ಕುಲಪತಿಯಾಗಿ ಸೇವೆ ಸಲ್ಲಿಸಿದ ಬಳಿಕ ರಾಜಕೀಯ ಪ್ರವೇಶಿಸಿ ಭಾರತೀಯ ಜನಸಂಘವನ್ನು ಸ್ಥಾಪಿಸುವ ಮೂಲಕ ರಾಷ್ಟ್ರೀಯ ಚಿಂತನೆಗೆ ಹೊಸ ದಿಕ್ಕು ನೀಡಿದರು ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ 17 ಮಂಡಲಗಳಲ್ಲಿ ಈಗಾಗಲೇ ಸ್ಮರಣಾ ಕಾರ್ಯಕ್ರಮಗಳು ನಡೆದಿವೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಜೆಪಿ ಬೂತ್ ಸಮಿತಿಗಳು ಹಾಗೂ ಕಾರ್ಯಕರ್ತರು ಮತದಾರರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಸ್ವಾಗತಿಸಿದರು. ಪ್ರಶಾಂತ ನಾಯ್ಕ ಕಾರ್ಯಕ್ರಮ ನಿರೂಪಿಸಿದರೆ, ಶಿವಾಜಿ ನರಸಾನಿ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಭಾಗ ಸಹ-ಪ್ರಭಾರಿ ಆರ್.ಡಿ. ಹೆಗಡೆ, ಮಾಜಿ ಸಚಿವ ಶಿವಾನಂದ ನಾಯ್ಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ಸಂಸ್ಮರಣ ಪಾಕ್ಷಿಕ ಸಂಚಾಲಕ ಉಮೇಶ್ ಭಾಗ್ವತ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ ಸೇರಿದಂತೆ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಯುವ ಮೋರ್ಚಾ, ಮಹಿಳಾ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share