ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆದ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಬೂತ್ ಮಟ್ಟದಿಂದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಸಹ ಉಸ್ತುವಾರಿ ಡಾ. ಕಾಸಂ ವೆಂಕಟೇಶ್ವರಲು ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಉಪಸ್ಥಿತರಿದ್ದರು. ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದು ಮತ್ತು ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸಂಘಟಿತ ಹೋರಾಟ ರೂಪಿಸುವ ಬಗ್ಗೆಯೂ ಸಮಾಲೋಚನೆ ನಡೆಯಿತು.
ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ಪಿ. ರಾಜೀವ್, ನಂದೀಶ್ ರೆಡ್ಡಿ, ರಾಜ್ಯ ಉಪಾಧ್ಯಕ್ಷರಾದ ರೂಪಾಲಿ ನಾಯ್ಕ ಸೇರಿದಂತೆ ರಾಜ್ಯ ಕಾರ್ಯದರ್ಶಿಗಳು, ವಿವಿಧ ಪ್ರಕೋಷ್ಠಗಳ ರಾಜ್ಯ ಸಂಚಾಲಕರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.


