Thursday, July 23, 2026
Join WhatsApp Group
HomeStateಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ-ಪ್ರಮಾಣ?

ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ-ಪ್ರಮಾಣ?

ಅಡ್ಡಮತದಾನ ಬೆನ್ನಲ್ಲೇ ಬಿಜೆಪಿ ಮಾಸ್ಟರ್‌ಪ್ಲಾನ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ನಿರೀಕ್ಷಿತ ಮತಗಳು ಲಭಿಸದ ಹಿನ್ನೆಲೆಯಲ್ಲಿ ಅಡ್ಡಮತದಾನದ ಆರೋಪಗಳು ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕತ್ವ ಮಹತ್ವದ ಹೆಜ್ಜೆಯೊಂದನ್ನು ಇಡಲು ಮುಂದಾಗಿದೆ. ಪಕ್ಷದ ಎಲ್ಲಾ 63 ಶಾಸಕರನ್ನು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಗೆ ಕರೆಸಿ ಆಣೆ-ಪ್ರಮಾಣ ಮಾಡಿಸುವ ಕುರಿತು ಚಿಂತನೆ ನಡೆಸುತ್ತಿರುವ ಮಾಹಿತಿ ಕೇಳಿಬರುತ್ತಿದೆ.

ಪಕ್ಷಕ್ಕೆ ದ್ರೋಹ ಎಸಗಿದವರು ಯಾರು ಎಂಬುದನ್ನು ಪತ್ತೆಹಚ್ಚುವ ಉದ್ದೇಶದಿಂದ ಧರ್ಮಸ್ಥಳದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ವಿಶೇಷ ಸಭೆ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಈ ವಾರ ಅಥವಾ ಮುಂದಿನ ವಾರ ಸಭೆ ನಡೆಯುವ ಸಾಧ್ಯತೆ ಇದ್ದು, ಎಲ್ಲಾ ಶಾಸಕರೂ ಭಾಗವಹಿಸುವ ನಿರೀಕ್ಷೆಯಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ವರು ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದ್ದು, ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಬೇಸರ ಉಂಟಾಗಿದೆ ಎಂದಿದ್ದಾರೆ.

ಅಡ್ಡಮತದಾನದ ಆರೋಪದ ಹಿನ್ನೆಲೆಯಲ್ಲಿ ಎಲ್ಲ 63 ಶಾಸಕರ ಮೇಲೂ ಅನುಮಾನ ವ್ಯಕ್ತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಬೇಕೆಂಬ ಉದ್ದೇಶದಿಂದ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಷಯವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿತಿನ್ ನಬಿನ್ ಅವರ ಗಮನಕ್ಕೂ ತರಲಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಆರ್. ಅಶೋಕ್ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸಭೆಯ ದಿನಾಂಕ ನಿಗದಿಪಡಿಸಲಾಗುವುದು ಎಂದಿದ್ದಾರೆ.

ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಾಸಕರು ಆಣೆ-ಪ್ರಮಾಣ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದವರು ಯಾರು ಎಂಬುದು ಬಹಿರಂಗವಾಗಲಿ ಎಂಬ ಆಶಯವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ಈ ಬೆಳವಣಿಗೆ, ಅಡ್ಡಮತದಾನದ ಆರೋಪದ ತನಿಖೆಗೆ ಯಾವ ತಿರುವು ನೀಡಲಿದೆ ಎಂಬ ಕುತೂಹಲವನ್ನು ಹೆಚ್ಚಿಸಿದ್ದು, ಬಿಜೆಪಿ ಮುಂದಿನ ನಡೆ ಏನಾಗಲಿದೆ ಎಂಬುದರತ್ತ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share