ಗೇಟ್ ತಳ್ಳಿ ಒಳನುಗ್ಗಿದ ಕಾರ್ಯಕರ್ತರು
ಕಾರವಾರ: ಜಿಲ್ಲೆಯ ವಿವಿಧ ಮೂಲಭೂತ ಸಮಸ್ಯೆಗಳು ಹಾಗೂ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಶುಕ್ರವಾರ ನಡೆಸಿದ ಪ್ರತಿಭಟನೆ ಕೆಲಕಾಲ ಉದ್ವಿಗ್ನ ಸ್ವರೂಪ ಪಡೆದುಕೊಂಡಿತು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೃಹತ್ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿದ ವೇಳೆ, ಜಿಲ್ಲಾಧಿಕಾರಿಗಳೇ ಖುದ್ದಾಗಿ ಆಗಮಿಸಿ ಮನವಿ ಸ್ವೀಕರಿಸಬೇಕು ಎಂದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟು ಹಿಡಿದರು. ಆದರೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಗೇಟ್ ತಳ್ಳಿ ಕಚೇರಿ ಆವರಣದೊಳಗೆ ನುಗ್ಗಲು ಮುಂದಾದರು.
ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ತಳ್ಳಾಟ-ಉಜ್ಜಾಟ ನಡೆಯಿತು. ಪೊಲೀಸರ ತಡೆಯ ನಡುವೆಯೂ ಪ್ರಮುಖ ದ್ವಾರದವರೆಗೆ ತೆರಳಿದ ಕಾರ್ಯಕರ್ತರು ಕಚೇರಿ ಆವರಣದಲ್ಲೇ ಕುಳಿತು ಧರಣಿ ನಡೆಸಿ, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಗತ್ಯವಿದ್ದರೆ ಅಹೋರಾತ್ರಿ ಧರಣಿಗೂ ಸಿದ್ಧ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಜಿಲ್ಲೆಯ ಜನರ ಹಲವು ಸಮಸ್ಯೆಗಳನ್ನು ಹೊತ್ತು ಬಂದ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮನವಿಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳಿಗೆ ಸಮಯವಿಲ್ಲವೇ ಎಂದು ಪ್ರಶ್ನಿಸಿದರಲ್ಲದೆ, ಜಿಲ್ಲಾಡಳಿತ ಕನಿಷ್ಠ ಸೌಜನ್ಯವನ್ನೂ ಪಾಲಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕೆಲಕಾಲ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅಂತಿಮವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಇದಾದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.