ಯಲ್ಲಾಪುರ: ಚಂದಗುಳಿಯ ಶ್ರೀ ಗಂಟೆ ಗಣಪತಿ ಕ್ಷೇತ್ರವು ಭಕ್ತರ ಅಭೀಷ್ಟೆಗಳನ್ನು ಈಡೇರಿಸುವ ಕ್ಷೇತ್ರವಾಗಿದ್ದು, ಕ್ಷೇತ್ರದ ಜನರ ಸುಖ-ಶಾಂತಿ, ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಸ್ವಾಮಿಯಲ್ಲಿ ಪ್ರಾರ್ಥಿಸಿರುವುದಾಗಿ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಹೇಳಿದರು.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಂದಗುಳಿ ಗ್ರಾಮದ ಶ್ರೀ ಗಂಟೆ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.ಶಾಸಕರು ದೇವರ ದರ್ಶನ ಪಡೆದು ಮಹಾಪೂಜೆ ಹಾಗೂ ಅರ್ಚನೆಯಲ್ಲಿ ಪಾಲ್ಗೊಂಡು, ಕ್ಷೇತ್ರದ ಸಮಸ್ತ ಜನರ ಒಳಿತಿಗಾಗಿ ಪ್ರಾರ್ಥಿಸಿದರು.
ದೇವಸ್ಥಾನಕ್ಕೆ ಆಗಮಿಸಿದ ಶಾಸಕರನ್ನು ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಚಂದಗುಳಿಯ ಶ್ರೀ ಗಂಟೆ ಗಣಪತಿಯು ಅತ್ಯಂತ ಶಕ್ತಿಯುತ ದೇವರಾಗಿದ್ದು, ಭಕ್ತರ ಅಭೀಷ್ಟೆಗಳನ್ನು ಈಡೇರಿಸುವ ಶಕ್ತಿಪೀಠವಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆಯುವುದು ಸಂತಸ ತಂದಿದೆ. ನಾಡಿನ ಜನರಿಗೆ ಸುಖ, ಶಾಂತಿ, ಸಮೃದ್ಧಿ ದೊರೆಯಲಿ ಹಾಗೂ ಕ್ಷೇತ್ರದ ಅಭಿವೃದ್ಧಿ ಮತ್ತಷ್ಟು ಆಗಲಿ ಎಂದು ಪ್ರಾರ್ಥಿಸಿರುವುದಾಗಿ ಶಾಸಕ ಭೀಮಣ್ಣ ನಾಯ್ಕ್ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರ ಕುಟುಂಬದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.