Friday, July 24, 2026
Join WhatsApp Group
HomeLocal Newsಮಕ್ಕಳಿಂದಲೇ ಪರಿಸರ ಪಾಠ: ದಶಲಕ್ಷ ಗಿಡ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಮಕ್ಕಳಿಂದಲೇ ಪರಿಸರ ಪಾಠ: ದಶಲಕ್ಷ ಗಿಡ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಶಿರಸಿ: ಅರಣ್ಯವಾಸಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ದಶಲಕ್ಷ ಗಿಡ ನೆಡುವ ಅಭಿಯಾನ’ಕ್ಕೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದ್ದು, ಪಾಲಕರೊಂದಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಗಿಡ ನೆಡುವ ಕಾರ್ಯದಲ್ಲಿ ಭಾಗಿಯಾಗಿರುವುದು ಶ್ಲಾಘನೀಯ ಬೆಳವಣಿಗೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಅಭಿಯಾನದ ಮೊದಲ ಹಂತದ ಪ್ರಗತಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯ 137 ಗ್ರಾಮ ಪಂಚಾಯಿತಿ ವ್ಯಾಪ್ತಿಯ 650ಕ್ಕೂ ಹೆಚ್ಚು ಗ್ರಾಮಗಳಲ್ಲಿ ನಡೆಯುತ್ತಿರುವ ಈ ಐತಿಹಾಸಿಕ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ತಿಳಿಸಿದ್ದಾರೆ.

ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜೋಯಿಡಾ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಹಾಗೂ ಕಾರವಾರ ತಾಲೂಕುಗಳಲ್ಲಿ ಸಾವಿರಾರು ಗ್ರೀನ್ ಕಾರ್ಡ್ ಪ್ರಮುಖರ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯ ನಡೆಯುತ್ತಿದ್ದು, ಈ ಬಾರಿ ಮಕ್ಕಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆ ಅಭಿಯಾನದ ಪ್ರಮುಖ ವಿಶೇಷತೆಯಾಗಿದೆ.

ಅರಣ್ಯ ಭೂಮಿಯಲ್ಲೇ ಜೀವನ ಕಟ್ಟಿಕೊಂಡಿರುವ ಅರಣ್ಯವಾಸಿಗಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಸಾಂದ್ರತೆ ಹೆಚ್ಚಿಸುವ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಅಭಿಯಾನ ಆರಂಭಿಸಲಾಗಿತ್ತು. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಅಭಿಯಾನದಲ್ಲಿ ಈ ಬಾರಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಗ್ರೀನ್ ಕಾರ್ಡ್ ಪ್ರಮುಖರು ಮಾಡಿದ ಪ್ರೇರಣಾದಾಯಕ ಕಾರ್ಯ ಶ್ಲಾಘನೀಯವಾಗಿದೆ ಎಂದು ರವೀಂದ್ರ ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯಾದ್ಯಂತ ತುಂತುರು ಮಳೆಯ ನಡುವೆಯೂ ಮಹಿಳೆಯರು, ಕುಟುಂಬ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉತ್ಸಾಹದಿಂದ ಗಿಡ ನೆಡುವ ಕಾರ್ಯದಲ್ಲಿ ಪಾಲ್ಗೊಂಡಿದ್ದು, 100ಕ್ಕೂ ಹೆಚ್ಚು ವಿವಿಧ ಜಾತಿಯ ಸಸಿಗಳನ್ನು ನೆಡಲಾಗಿದೆ. ಇದು ಪರಿಸರ ಜಾಗೃತಿ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share