ಶಿರಸಿ: ತಾಲೂಕಿನ ಹುಲೇಕಲ್ ಸಮೀಪದ ಮರನಕೊಡ್ಲು ಗ್ರಾಮದಲ್ಲಿ ತೆಂಗಿನ ಮರ ಹತ್ತಿದ್ದ ವೇಳೆ ಕಾಲು ಜಾರಿ ಬಿದ್ದ ಕೂಲಿ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ರಾಮ ಶಾಂಭಾ ಮರಾಠಿ (53) ಎಂದು ಗುರುತಿಸಲಾಗಿದೆ. ಇವರು ಕಳೆದ ಮಾರ್ಚ್ 29ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿದ್ದ ಸುಮಾರು 35 ಅಡಿ ಎತ್ತರದ ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದರು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೊದಲು ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಹಾಗೂ ನಂತರ ಮಂಗಳೂರು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 13ರಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಈ ಕುರಿತು ಮೃತರ ಪತ್ನಿ ಮಹಾಲಕ್ಷ್ಮೀ ರಾಮ ಮರಾಠಿ ಅವರು ನೀಡಿದ ದೂರಿನ ಆಧಾರದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.