ಕಾರವಾರ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಅ.1ರಂದು ಅಂತರರಾಜ್ಯ ಚಂಡಮಾರುತ ಅಣಕು ಕಾರ್ಯಾಚರಣೆ ನಡೆಯಲಿದ್ದು, ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ. ಇದು ಅಣಕು ಕಾರ್ಯಾಚರಣೆಯಾಗಿರುವುದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಂಭವಿಸಬಹುದಾದ ಚಂಡಮಾರುತದಂತಹ ವಿಪತ್ತುಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ಸಾಮರ್ಥ್ಯವನ್ನು ಪರೀಕ್ಷಿಸುವ ಉದ್ದೇಶದಿಂದ ಈ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಂದಾಯ, ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಆರೋಗ್ಯ, ಎನ್‌ಡಿಆರ್‌ಎಫ್, ಬಂದರು, ಸ್ಥಳೀಯ ಸಂಸ್ಥೆಗಳು, ನೌಕಾ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳು ಇದರಲ್ಲಿ ಭಾಗವಹಿಸಲಿವೆ.
ಚಂಡಮಾರುತದ ಸಂದರ್ಭದಲ್ಲಿ ಎದುರಾಗಬಹುದಾದ ಭಾರಿ ಮಳೆ, ಬಿರುಗಾಳಿ, ಸಮುದ್ರದ ಅಬ್ಬರ, ಕಡಲ್ಕೊರೆತ, ಪ್ರವಾಹ, ಮರಗಳ ಉರುಳುವಿಕೆ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಂತಹ ವಿವಿಧ ತುರ್ತು ಪರಿಸ್ಥಿತಿಗಳನ್ನು ಅಣಕು ಕಾರ್ಯಾಚರಣೆಯಲ್ಲಿ ಕೃತಕವಾಗಿ ಸೃಷ್ಟಿಸಲಾಗುತ್ತದೆ. ಇಂತಹ ಸಂದರ್ಭಗಳನ್ನು ನಿಭಾಯಿಸಲು ಇಲಾಖೆಗಳು ಎಷ್ಟರ ಮಟ್ಟಿಗೆ ಸಿದ್ಧವಾಗಿವೆ ಎಂಬುದನ್ನು ಈ ಮೂಲಕ ಪರಿಶೀಲಿಸಲಾಗುತ್ತದೆ.
ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಗುರುತಿಸಿರುವ ಸ್ಥಳಗಳಲ್ಲಿ ಕೃತಕ ವಿಪತ್ತು ಪರಿಸ್ಥಿತಿಗಳನ್ನು ನಿರ್ಮಿಸಿ ಕಾರ್ಯಾಚರಣೆ ನಡೆಸಲಾಗುತ್ತದೆ. ಕಾರವಾರದ ಬೈತಖೋಲ್ ಹಾಗೂ ಕದ್ರಾ ಪ್ರದೇಶ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಯಲಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಹೊನ್ನಾವರದ ಕಾಸರಕೋಡ್ ಮೀನುಗಾರಿಕಾ ಪ್ರದೇಶ, ಭಟ್ಕಳದ ಮುರುಡೇಶ್ವರ ಬೀಚ್ ಹಾಗೂ ಕುಮಟಾ ತಾಲ್ಲೂಕಿನ ತದಡಿ ಮೀನುಗಾರಿಕಾ ಬಂದರು ಸೇರಿದಂತೆ ಪ್ರಮುಖ ಸ್ಥಳಗಳನ್ನು ಪರಿಗಣಿಸಲಾಗಿದೆ.
ತುರ್ತು ಪರಿಸ್ಥಿತಿಗೆ ಅನುಗುಣವಾಗಿ ಸ್ಥಳೀಯ ಮಟ್ಟದಲ್ಲಿ ವಿವಿಧ ಇಲಾಖೆಗಳ ಕಾರ್ಯಾಚರಣೆಯನ್ನು ಸಮನ್ವಯಗೊಳಿಸಲು Incident Commander ಅವರನ್ನು ನಿಯೋಜಿಸಲಾಗುತ್ತದೆ. ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ (DEOC) ಮೂಲಕ ಮಾಹಿತಿ ಸಂಗ್ರಹಣೆ, ರವಾನೆ ಹಾಗೂ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಯಲಿದೆ.
ಅಣಕು ಕಾರ್ಯಾಚರಣೆಯ ಮೂಲಕ ವಿಪತ್ತು ಸಂದರ್ಭದಲ್ಲಿ ವಿವಿಧ ಇಲಾಖೆಗಳು ತ್ವರಿತವಾಗಿ ಸ್ಪಂದಿಸುವ ಸಾಮರ್ಥ್ಯ, ಪರಸ್ಪರ ಸಮನ್ವಯ, ತುರ್ತು ಸೇವೆಗಳ ಲಭ್ಯತೆ ಹಾಗೂ ರಕ್ಷಣಾ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲಾಗುತ್ತದೆ. ಸಾರ್ವಜನಿಕರಲ್ಲಿ ಯಾವುದೇ ಆತಂಕ ಉಂಟಾಗದಂತೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದನ್ನು ನೈಜ ವಿಪತ್ತು ಎಂದು ಭಾವಿಸದೆ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


