ಶಿರಸಿ: ಕ್ರೀಡೆಯಲ್ಲಿ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾಸ್ಫೂರ್ತಿಯಿಂದ ಮುನ್ನಡೆಯಬೇಕು. ಗ್ರಾಮೀಣ ಹಾಗೂ ನಗರ ಭಾಗಗಳ ಯುವ ಕ್ರೀಡಾ ಪ್ರತಿಭೆಗಳಿಗೆ ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಲಿದ್ದು, ಕ್ರೀಡಾಪಟುಗಳು ತಮ್ಮ ಸಾಧನೆಯ ಮೂಲಕ ಶಿರಸಿ ತಾಲೂಕಿನ ಕೀರ್ತಿಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಶಿರಸಿಯ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಶಾಸಕರು, ಕ್ರೀಡೆಯಲ್ಲಿ ಸ್ಪರ್ಧೆಗಿಂತಲೂ ಕ್ರೀಡಾಸ್ಫೂರ್ತಿ ಮತ್ತು ಶಿಸ್ತು ಮುಖ್ಯವಾಗಿದ್ದು, ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ದಸರಾ ಕ್ರೀಡಾಕೂಟದ ಉದ್ಘಾಟನೆಯ ಬಳಿಕ ಶಾಸಕ ಭೀಮಣ್ಣ ನಾಯ್ಕ ಅವರು ಶಿರಸಿಯಲ್ಲಿ ನಿರ್ಮಾಣ ಹಂತದಲ್ಲಿರುವ ಇಂಡೋರ್ ಸ್ಟೇಡಿಯಂಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಕಾಮಗಾರಿಯ ವಿವಿಧ ಹಂತಗಳನ್ನು ವೀಕ್ಷಿಸಿದ ಅವರು, ನಿರ್ಮಾಣ ಕಾರ್ಯವನ್ನು ಗುಣಮಟ್ಟದಿಂದ ಹಾಗೂ ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
ಕಾಮಗಾರಿ ಶೀಘ್ರ ಪೂರ್ಣಗೊಂಡು ಕ್ರೀಡಾಪಟುಗಳ ಬಳಕೆಗೆ ಒಳಾಂಗಣ ಕ್ರೀಡಾಂಗಣ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಕ್ರೀಡಾ ಸಂಘಟನಾಧಿಕಾರಿಗಳು, ಪ್ರಮುಖ ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.