ಶಿರಸಿ: ಅರಣ್ಯವಾಸಿಗಳಿಂದ ಮಳೆಗಾಲದಲ್ಲಿ ಹಮ್ಮಿಕೊಳ್ಳಲಾಗುವ ‘ದಶಲಕ್ಷ ಗಿಡ ನೆಡುವ ಅಭಿಯಾನ’ದ ಲಾಂಛನ ಬಿಡುಗಡೆ ಕಾರ್ಯಕ್ರಮ ಜೂನ್ 14ರಂದು ಶಿರಸಿಯಲ್ಲಿ ನಡೆಯಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 9.30ಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಜಿಲ್ಲೆಯ ಗ್ರೀನ್ ಕಾರ್ಡ್ ಪ್ರಮುಖರ ಸಮ್ಮುಖದಲ್ಲಿ ಅಭಿಯಾನದ ಲಾಂಛನವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅರಣ್ಯ ಭೂಮಿ ಹಕ್ಕಿಗಾಗಿ ಕಳೆದ 34 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ಹಿನ್ನಲೆಯಲ್ಲಿ, ಪರಿಸರ ರಕ್ಷಣೆ, ಸಂರಕ್ಷಣೆ ಹಾಗೂ ಅಭಿವೃದ್ಧಿಯ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಮಳೆಗಾಲದಲ್ಲಿ ಗಿಡ ನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ಕಾರ್ಯಕ್ರಮವು ವೇದಿಕೆಯ ಪ್ರಮುಖ ಹಾಗೂ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯ ಗ್ರೀನ್ ಕಾರ್ಡ್ ಪ್ರಮುಖರು ಹಾಗೂ ಪರಿಸರಾಸಕ್ತರು ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.