Friday, July 24, 2026
Join WhatsApp Group
HomeLocal Newsಸಹಕಾರಿ ಸಂಘಗಳ ಮೇಲೆ ಕಣ್ಣಿಡಿ!

ಸಹಕಾರಿ ಸಂಘಗಳ ಮೇಲೆ ಕಣ್ಣಿಡಿ!

ಕಾರವಾರ: ಜಿಲ್ಲೆಯ ಸಹಕಾರಿ ಸಂಘಗಳ ವ್ಯವಹಾರ ಹಾಗೂ ಆರ್ಥಿಕ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ತಪಾಸಣೆ ನಡೆಸಬೇಕು. ಸಾರ್ವಜನಿಕರ ಠೇವಣಿ ಹಣ ಸುರಕ್ಷಿತವಾಗಿರುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲವು ಸಹಕಾರಿ ಸಂಘಗಳಲ್ಲಿ ನಡೆದ ಆರ್ಥಿಕ ಅವ್ಯವಹಾರಗಳಿಂದ ಸಾರ್ವಜನಿಕರು ತಮ್ಮ ಠೇವಣಿ ಹಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಸಹಕಾರಿ ಸಂಘಗಳು ಹಾಗೂ ಬ್ಯಾಂಕ್‌ಗಳು ನಿಯಮಾನುಸಾರ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಅಧಿಕಾರಿಗಳು ಆಗಾಗ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

ಮುಂಡಗೋಡು, ಹಳಿಯಾಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ (ಫೈನಾನ್ಸ್‌) ವಿರುದ್ಧ ದೂರುಗಳು ಬರುತ್ತಿವೆ. ಈ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾರ್ಗಸೂಚಿಗಳನ್ನು ಪಾಲಿಸುತ್ತಿವೆಯೇ, ವಿಧಿಸುತ್ತಿರುವ ಬಡ್ಡಿದರಗಳು ನಿಯಮಬದ್ಧವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿರುವ ಖಾಸಗಿ ಹಣಕಾಸು ಸಂಸ್ಥೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿ, ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ತಕ್ಷಣವೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಹಕಾರಿ ಸಂಘಗಳ ಆರ್ಥಿಕ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ದೂರುಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಸಹಕಾರಿ ಸಂಘಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರು ಸುರಕ್ಷಿತವಾಗಿ ವ್ಯವಹರಿಸುವ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪವಿಭಾಗಾಧಿಕಾರಿ ಶ್ರವಣ ಕುಮಾರ್, ಸಹಕಾರಿ ಸಂಘಗಳ ಉಪನಿಬಂಧಕಿ ತೇಜಸ್ವಿನಿ ಗೌಡ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share