Monday, September 7, 2026
Join WhatsApp Group
HomeLocal Newsನಕಲಿ ವೈದ್ಯರಿಗೆ ಡಿಸಿ ಖಡಕ್‌ ಎಚ್ಚರಿಕೆ

ನಕಲಿ ವೈದ್ಯರಿಗೆ ಡಿಸಿ ಖಡಕ್‌ ಎಚ್ಚರಿಕೆ

ಕ್ಲಿನಿಕ್‌ ಸೀಲ್‌ ಮಾಡಿ ಪ್ರಕರಣ ದಾಖಲಿಸಲು ಸೂಚನೆ

ಕಾರವಾರ: ಜಿಲ್ಲೆಯಾದ್ಯಂತ ನಿಯಮಬಾಹಿರವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಕಲಿ ವೈದ್ಯರು ಹಾಗೂ ಅಕ್ರಮ ಕ್ಲಿನಿಕ್‌ಗಳ ವಿರುದ್ಧ ಗರಿಷ್ಠ ಪ್ರಮಾಣದ ದಂಡ ವಿಧಿಸುವುದರ ಜೊತೆಗೆ, ಅಗತ್ಯವಿದ್ದಲ್ಲಿ ಕ್ಲಿನಿಕ್‌ಗಳನ್ನು ಮುಚ್ಚಿಸಿ ಪ್ರಕರಣ ದಾಖಲಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಬಂದಿರುವ ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಈ ಉದ್ದೇಶಕ್ಕಾಗಿ ಜಿಲ್ಲಾಮಟ್ಟದಲ್ಲಿ ವಿಶೇಷ ತಂಡವನ್ನು ಈಗಾಗಲೇ ರಚಿಸಲಾಗಿದೆ. ಅನುಮತಿ ಪಡೆದ ವೈದ್ಯಕೀಯ ಪದ್ಧತಿಯಲ್ಲಿ ಮಾತ್ರ ಸಾರ್ವಜನಿಕರಿಗೆ ಚಿಕಿತ್ಸೆ ನೀಡಬೇಕು. ಅನುಮತಿಯಿಲ್ಲದೆ ಬೇರೆ ವೈದ್ಯಕೀಯ ಪದ್ಧತಿಯಲ್ಲಿ ಚಿಕಿತ್ಸೆ ನೀಡುವುದು ಅಥವಾ ಔಷಧ ವಿತರಿಸುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕ್‌ಗಳು, ಆಸ್ಪತ್ರೆಗಳು ಹಾಗೂ ನರ್ಸಿಂಗ್‌ ಹೋಮ್‌ಗಳಲ್ಲಿ ನಕಲಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ ದೃಢಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ನೀಡಲಾದ ಮಾಹಿತಿಯಂತೆ, 2026ರ ಏಪ್ರಿಲ್‌ನಿಂದ ಇಲ್ಲಿಯವರೆಗೆ ಕೆಪಿಎಂಇ ಕಾಯ್ದೆ ಉಲ್ಲಂಘಿಸಿದ 7 ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅವರ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ. ಜೊತೆಗೆ ಒಟ್ಟು ₹1.45 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಗದೀಶ ಯಾಜಿ, ಆರ್ಥೋಪೆಡಿಕ್ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ನಿತಿನ್ ಪಿಕಳೆ, ಐಎಂಎ ಅಧ್ಯಕ್ಷ ಡಾ. ಸುರೇಶ್ ಭಟ್, ಮಹಿಳಾ ಸಾಮಾಜಿಕ ಕಾರ್ಯಕರ್ತೆ ಯಶೋಧ ಹೆಗಡೆ, ವಕೀಲ ಡಾ. ಕೃಷ್ಣಾನಂದ ಬಿ.ನಾಯ್ಕ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share