ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಖಡಕ್ ಎಚ್ಚರಿಕೆ
ಕಾರವಾರ: ಮರಣ ಪ್ರಮಾಣ ಪತ್ರ ವಿತರಿಸುವಾಗ ಮೃತ ವ್ಯಕ್ತಿಯ ಸರಿಯಾದ ಆಧಾರ್ ಸಂಖ್ಯೆಯನ್ನೇ ದಾಖಲಿಸಬೇಕು. ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಜನನ–ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೃತರ ಬದಲಿಗೆ ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆ ದಾಖಲಿಸಿದರೆ ಆ ವ್ಯಕ್ತಿ ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಹೆಸರು, ವಿಳಾಸ ಹಾಗೂ ಆಧಾರ್ ಸಂಖ್ಯೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತ್ರ ಪ್ರಮಾಣ ಪತ್ರ ವಿತರಿಸಬೇಕು ಎಂದು ಸೂಚಿಸಿದರು.
ಜನನ ಮತ್ತು ಮರಣ ನೋಂದಣಿಗೆ ಸಂಬಂಧಿಸಿದಂತೆ ನೋಂದಣಾಧಿಕಾರಿಗಳ ಕ್ರಮದಿಂದ ಸಾರ್ವಜನಿಕರಿಗೆ ಅಸಮಾಧಾನವಾದರೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಮರಣ ಘಟನೆಗಳಿಗೆ ಸಂಬಂಧಿಸಿದ ವೈದ್ಯಕೀಯ ಪ್ರಮಾಣ ಪತ್ರವನ್ನು ಇ-ಜನ್ಮ ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಮರಣದ ಕಾರಣವನ್ನು ದಾಖಲಿಸಿ ನೋಂದಣಿ ಪೂರ್ಣಗೊಳಿಸಬೇಕು ಹಾಗೂ ಎಲ್ಲಾ ಜನನ–ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲ್ ಸಹಿಯೊಂದಿಗೆ ವಿತರಿಸಬೇಕು ಎಂದು ನಿರ್ದೇಶನ ನೀಡಿದರು.
ಮನೆಗಳಲ್ಲಿ ಸಂಭವಿಸುವ ಮರಣಗಳನ್ನು ವಿಳಂಬವಿಲ್ಲದೆ ನಿಗದಿತ ಅವಧಿಯಲ್ಲಿ ನೋಂದಣಿ ಮಾಡಬೇಕು. ತಾಲೂಕು ಮಟ್ಟದಲ್ಲಿ ಪ್ರತಿ ತಿಂಗಳು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಸಿ, ನೋಂದಣಿ ಘಟಕಗಳ ಪರಿಶೀಲನೆ ಹಾಗೂ ಅಧಿಕಾರಿಗಳಿಗೆ ತರಬೇತಿ ಆಯೋಜಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ ಮಾಹಿತಿ ನೀಡಿ, ಕಳೆದ ತ್ರೈಮಾಸಿಕದಲ್ಲಿ ಜಿಲ್ಲೆಯಲ್ಲಿ 4,682 ಜನನ ಹಾಗೂ 2,425 ಮರಣ ಘಟನೆಗಳು ದಾಖಲಾಗಿವೆ ಎಂದು ತಿಳಿಸಿದರು. ಒಂದು ವರ್ಷದೊಳಗಿನ 13 ಶಿಶುಗಳು ಹಾಗೂ ಐದು ವರ್ಷದೊಳಗಿನ 3 ಮಕ್ಕಳ ಮರಣ ದಾಖಲಾಗಿದೆ ಎಂದರು.
ಜನನ–ಮರಣ ದಾಖಲೆಗಳ ಡಿಜಿಟಲೀಕರಣ ಕಾರ್ಯದಡಿ ಹೊನ್ನಾವರ ಹಾಗೂ ಅಂಕೋಲಾ ತಾಲೂಕುಗಳಲ್ಲಿ ಇದುವರೆಗೆ 2,80,652 ದಾಖಲೆಗಳನ್ನು ಸ್ಕ್ಯಾನ್ ಮತ್ತು ಡಿಜಿಟಲೀಕರಣ ಮಾಡಲಾಗಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಕ್ರಿಮ್ಸ್ನ ಡೀನ್ ಡಾ. ಪೂರ್ಣಿಮಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ ಉಪಸ್ಥಿತರಿದ್ದರು. ಅಲ್ಲದೆ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದರು.