Monday, September 7, 2026
Join WhatsApp Group
HomeLocal Newsರಸ್ತೆ ದುರವಸ್ಥೆ; ಜನರ ಸಂಚಾರಕ್ಕೆ ಸಂಕಷ್ಟ

ರಸ್ತೆ ದುರವಸ್ಥೆ; ಜನರ ಸಂಚಾರಕ್ಕೆ ಸಂಕಷ್ಟ

ಯಲ್ಲಾಪುರ: ತಾಲೂಕಿನ ದೇಹಳ್ಳಿ ಕ್ರಾಸ್‌ನಿಂದ ಬಿಸಗೋಡಕ್ಕೆ ಸಂಪರ್ಕ ಕಲ್ಪಿಸುವ ಸುಮಾರು ಎರಡು ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಈ ರಸ್ತೆಯ ವ್ಯಾಪ್ತಿಯಲ್ಲಿ ಹಿ.ಪ್ರಾ. ಶಾಲೆ ಹಾಗೂ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿದ್ದು, ಪ್ರತಿದಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಆದರೆ ರಸ್ತೆ ಹದಗೆಟ್ಟಿರುವುದರಿಂದ ವಾಹನ ಸಂಚಾರಕ್ಕೂ ಸಮಸ್ಯೆಯಾಗಿದ್ದು, ಬಸ್ ವ್ಯವಸ್ಥೆಯ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ದೇಹಳ್ಳಿ ಕ್ರಾಸ್‌ನಿಂದ ಬಿಸಗೋಡಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸುಮಾರು 6–7 ಗ್ರಾಮಗಳಿಗೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಹಲವು ವರ್ಷಗಳಿಂದ ರಸ್ತೆಯ ದುರವಸ್ಥೆ ಮುಂದುವರಿದಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ವಾರ್ಡ್ ಸಭೆ, ಗ್ರಾಮ ಸಭೆ, ಜನಸಂಪರ್ಕ ಸಭೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ರಸ್ತೆ ಸಮಸ್ಯೆಯನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಳೆದ ಎರಡು ವರ್ಷಗಳಿಂದ ರಸ್ತೆ ದುರಸ್ತಿಗಾಗಿ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ರಸ್ತೆ ದುರವಸ್ಥೆ ತೀವ್ರಗೊಂಡ ಸಂದರ್ಭದಲ್ಲಿ ಸಾರ್ವಜನಿಕರೇ ಜೋಳಿಗೆ ಅಭಿಯಾನ ನಡೆಸಿ ಹಣ ಸಂಗ್ರಹಿಸಿ, ಮೋರಂ ಮಣ್ಣು ಹಾಕಿಕೊಂಡು ತಾತ್ಕಾಲಿಕವಾಗಿ ಸಂಚಾರಕ್ಕೆ ಅನುಕೂಲ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಮಳೆ ಹಾಗೂ ನಿರಂತರ ವಾಹನ ಸಂಚಾರದಿಂದ ಮತ್ತೆ ರಸ್ತೆ ಹಾಳಾಗಿದೆ.

ಇದೀಗ ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರಸ್ತೆಯನ್ನು ಕೇವಲ ತಾತ್ಕಾಲಿಕವಾಗಿ ದುರಸ್ತಿ ಮಾಡುವ ಬದಲು ಸಿಮೆಂಟ್ ಅಥವಾ ಡಾಂಬರ್ ರಸ್ತೆಯಾಗಿ ಅಭಿವೃದ್ಧಿಪಡಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷಿತ ಸಂಚಾರದ ದೃಷ್ಟಿಯಿಂದ ಈ ರಸ್ತೆಯ ಸಮಸ್ಯೆಗೆ ಇನ್ನಾದರೂ ಆದ್ಯತೆ ನೀಡಿ, ಕಾಮಗಾರಿ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share