ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆ ಹಳೆ ದೆಹಲಿಯ ಜನನಿಬಿಡ ಧಾರ್ಮಿಕ ಹಾಗೂ ಐತಿಹಾಸಿಕ ತಾಣಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿರುವ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವಿಶೇಷವಾಗಿ ಕೆಂಪುಕೋಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಜನಸಂಚಾರ ಹೆಚ್ಚು ಇರುವ ಚಾಂದಿನಿ ಚೌಕ್ ಭಾಗದ ದೇವಾಲಯಗಳು ಭದ್ರತಾ ಸಂಸ್ಥೆಗಳ ಗಮನಕ್ಕೆ ಬಂದಿವೆ. ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸುವ ಸಾಧ್ಯತೆ ಇರುವುದಾಗಿ ಮೂಲಗಳು ಸೂಚಿಸಿವೆ.
ಲಭ್ಯ ಮಾಹಿತಿಯ ಪ್ರಕಾರ, ಫೆಬ್ರವರಿ 6ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ಮಸೀದಿ ಸ್ಫೋಟದ ನಂತರದ ಪ್ರತೀಕಾರದ ಭಾಗವಾಗಿ ಈ ಸಂಚು ರೂಪುಗೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ದೇಶದ ವಿವಿಧ ಪ್ರಮುಖ ಧಾರ್ಮಿಕ ತಾಣಗಳು ಉಗ್ರರ ಸಂಭಾವ್ಯ ಗುರಿಯಾಗಬಹುದು ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.
ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಹಾಗೂ ಕೇಂದ್ರ ಭದ್ರತಾ ಪಡೆಗಳು ಸೂಕ್ಷ್ಮ ವಲಯಗಳಲ್ಲಿ ಕಣ್ಗಾವಲು ಹೆಚ್ಚಿಸಿವೆ. ಹಳೆಯ ದೆಹಲಿಯ ಪ್ರವೇಶ ದ್ವಾರಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಲಾಗಿದ್ದು, ದೇವಾಲಯಗಳು ಮತ್ತು ಪ್ರವಾಸಿ ತಾಣಗಳ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಶಯಾಸ್ಪದ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ನಿಗಾವಹಿಸುವ ಕ್ರಮಗಳು ಜಾರಿಗೊಂಡಿವೆ.