ಕಾರವಾರ: 12ನೇ ಶತಮಾನದಲ್ಲೇ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾನತೆ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ಇಂದು ದೇಶದಲ್ಲಿ ಎಲ್ಲರೂ ಸಮಾನತೆ ಮತ್ತು ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ–2026ರ ಅಂಗವಾಗಿ ‘ಪ್ರಜಾಪ್ರಭುತ್ವದಲ್ಲಿ ಯುವ ಸಂಸತ್ತು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶ ಕಟ್ಟುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಯುವಜನರಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೌಲ್ಯಗಳ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಶಾಲಾ-ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಯುವಜನರಿಗೆ ಪ್ರಜಾಪ್ರಭುತ್ವದ ಆಶಯಗಳನ್ನು ಪರಿಚಯಿಸಬೇಕು ಎಂದರು.
ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್ ಮಾತನಾಡಿ, ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ’ ಇರುವ ವ್ಯವಸ್ಥೆಯೇ ಪ್ರಜಾಪ್ರಭುತ್ವ. ಸಂವಿಧಾನದ ಆಶಯಗಳನ್ನು ಅನುಸರಿಸಿ ಆಡಳಿತ ನಡೆಸುವ ಜೊತೆಗೆ ಯುವಜನರಿಗೆ ಅಗತ್ಯ ಅವಕಾಶಗಳನ್ನು ಕಲ್ಪಿಸಬೇಕು ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ನೀಡಿರುವ ಹಕ್ಕುಗಳು ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಪ್ರಜಾಪ್ರಭುತ್ವದ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಒಂದು ತಿಂಗಳ ಕಾಲ ಯುವ ಸಂವಾದ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಈ ಸಭೆಗಳಲ್ಲಿ ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಯುವಜನರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಕೋಲಾದ ಗೋಖಲೆ ಸೆಂಟಿನರಿ ಕಾಲೇಜಿನ ಪ್ರಾಚಾರ್ಯ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಸಿದ್ದಲಿಂಗಸ್ವಾಮಿ ವಿ. ವಸ್ತ್ರದ ಅವರು ‘ಯುವ ಸಂಪತ್ತು’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಶಾಸಕ ಗಣಪತಿ ಡಿ. ಉಳ್ವೇಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಚಂದ್ರ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ್ ವೈ.ಕೆ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.