ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಚುರುಕುಗೊಂಡಿದ್ದು, ಜಿಲ್ಲೆಯ ಎಲ್ಲ ಮತದಾರರಿಗೆ ಎನ್ಯುಮರೇಷನ್ ಫಾರ್ಮ್‌ಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರು ಇದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ ವಿತರಿಸಲಾಗಿದೆ. ಇದುವರೆಗೆ 4,97,840 ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮನೆ-ಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆ ವೇಳೆ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 6,365 ಮತದಾರರನ್ನು ಗುರುತಿಸಲಾಗಿದೆ.
ಇವುಗಳಲ್ಲಿ 1,235 ಶಾಶ್ವತವಾಗಿ ಸ್ಥಳಾಂತರಗೊಂಡವರು, 4,639 ಮರಣ ಹೊಂದಿದ ಮತದಾರರು ಹಾಗೂ 452 ದ್ವಿಪ್ರತಿ ನೋಂದಣಿ ಪ್ರಕರಣಗಳು ಸೇರಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಹಕರಿಸಿ, ಬಾಕಿ ಇರುವ ಎನ್ಯುಮರೇಷನ್ ಫಾರ್ಮ್‌ಗಳನ್ನು ಶೀಘ್ರವೇ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.