Friday, July 24, 2026
Join WhatsApp Group
HomeLocal Newsಮಳೆ ನಿಂತು ಹೋದಮೇಲೆ....

ಮಳೆ ನಿಂತು ಹೋದಮೇಲೆ….

ಗೋಕರ್ಣದಲ್ಲಿ ಮಳೆ ಅವಾಂತರ; ಸ್ವಚ್ಛತೆಗೆ ಸಿಇಒ ಖಡಕ್ ಸೂಚನೆ

ಗೋಕರ್ಣ: ಭಾನುವಾರ ಸುರಿದ ಧಾರಾಕಾರ ಮಳೆ ಗೋಕರ್ಣದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ನಿರಂತರ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿ ಆವರಣದಲ್ಲಿ ನೀರು ನುಗ್ಗಿ ಆತ್ಮಲಿಂಗದ ಸುತ್ತಲಿನ ಪ್ರದೇಶ ಜಲಾವೃತವಾಗಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರಸ್ತೆ, ಮನೆಗಳು ಹಾಗೂ ದೇವಾಲಯದ ಭೋಜನ ಶಾಲೆಯೂ ನೀರಿನಿಂದ ಆವೃತವಾಗಿತ್ತು.

ಮಹಾಗಣಪತಿ ದೇವಸ್ಥಾನದ ಮುಂಭಾಗದ ರಸ್ತೆ, ಮೇಲಿನಕೇರಿ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ತದಡಿ, ಮಾದನಗೇರಿ, ಹಿರೇಗುತ್ತಿ ಹಾಗೂ ಬರ್ಗಿ ಭಾಗಗಳಲ್ಲಿಯೂ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮಹಾಬಲೇಶ್ವರ ದೇವಸ್ಥಾನದ ಪಶ್ಚಿಮ ದ್ವಾರದ ಎದುರು ಕಡಲತೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಚರಂಡಿ ಸಂಗಮ ನಾಲೆಗೆ ಸೇರುವ ಜಾಗದಲ್ಲಿ ಅಡಚಣೆ ಉಂಟಾಗಿದ್ದರಿಂದ ಸುಮಾರು 200 ಮೀಟರ್ ಉದ್ದದ ರಸ್ತೆ ಕೊಳಚೆ ನೀರಿನಿಂದ ತುಂಬಿಕೊಂಡಿತ್ತಲ್ಲದೆ, ನೀರು ಸಮುದ್ರಕ್ಕೆ ಸರಾಗವಾಗಿ ಹರಿಯದೇ ಸಮಸ್ಯೆ ಮತ್ತಷ್ಟು ಗಂಭೀರವಾಗಿತ್ತು.

ಮಳೆ ಅವಾಂತರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಸೋಮವಾರ ಗೋಕರ್ಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ರಾಜ ಕಾಲುವೆಗಳ ನಿರ್ವಹಣೆ, ಮಹಾಬಲೇಶ್ವರ ದೇವಸ್ಥಾನದ ಆವರಣದ ನೈರ್ಮಲ್ಯ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಘನ ತ್ಯಾಜ್ಯ ವಿಲೇವಾರಿ ಕುರಿತು ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.

ಗೋಕರ್ಣದಂತಹ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಳೆಗಾಲದಲ್ಲಿ ನೀರು ನಿಲ್ಲದಂತೆ ರಾಜ ಕಾಲುವೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಕುಮಟಾ ಸಹಾಯಕ ಆಯುಕ್ತ ಶ್ರವಣ ಕುಮಾರ್, ಪಿಆರ್‌ಡಿ ಹಾಗೂ ಆರ್‌ಡಬ್ಲ್ಯುಡಿ ಇಲಾಖೆ ಅಧಿಕಾರಿಗಳು, ಕರ್ನಾಟಕ ಗ್ರಾಮೀಣ ಒಳಚರಂಡಿ ಯೋಜನೆಯ ಅಭಿಯಂತರರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share