ಕಾರವಾರ: ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಕಾರ್ಯಕ್ರಮಗಳ ಮಾಹಿತಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ), ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ‘ವಾರ್ತಾಲಾಪ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ತಲುಪಿದಾಗ ಮಾತ್ರ ಅರ್ಹರು ಅದರ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಇಲಾಖೆಗಳ ಜವಾಬ್ದಾರಿಯ ಜತೆಗೆ ಮಾಧ್ಯಮಗಳ ಸಹಕಾರವೂ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಮಾಧ್ಯಮಗಳಲ್ಲಿ ಪ್ರಕಟವಾಗುವ ಸಾರ್ವಜನಿಕ ಸಮಸ್ಯೆಗಳ ವರದಿಗಳನ್ನು ಗಮನಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆ ವಿಸ್ತಾರವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಲ್ಲ ಪ್ರದೇಶಗಳಿಗೂ ನೇರವಾಗಿ ತಲುಪಲು ಸಾಧ್ಯವಾಗದ ಸಂದರ್ಭಗಳಲ್ಲಿ ಮಾಧ್ಯಮ ವರದಿಗಳು ಆಡಳಿತಕ್ಕೆ ಸಮಸ್ಯೆಗಳತ್ತ ಗಮನ ಸೆಳೆಯುವ ಪ್ರಮುಖ ಮಾರ್ಗವಾಗಿವೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಮಾತನಾಡಿ, ಮಾಧ್ಯಮಗಳು ಸಾರ್ವಜನಿಕರು ಮತ್ತು ಆಡಳಿತದ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿವೆ. ಮಾಧ್ಯಮಗಳಲ್ಲಿ ಸಮಸ್ಯೆಗಳ ಕುರಿತು ವರದಿಯಾದ ತಕ್ಷಣ ಅವುಗಳನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ಸಂಬಂಧಪಟ್ಟ ಇಲಾಖೆಯಿಂದ ವರದಿ ಪಡೆದು ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದೀಪನ್ ಎಂ.ಎನ್ ಮಾತನಾಡಿ, ಮಾಧ್ಯಮಗಳು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದರ ಜತೆಗೆ ಸಾರ್ವಜನಿಕರ ಪ್ರತಿಕ್ರಿಯೆಯನ್ನು ಇಲಾಖೆಗೆ ತಲುಪಿಸುವ ಪ್ರಮುಖ ಸೇತುವೆಯಾಗಿವೆ ಎಂದರು.
ಮಾಹಿತಿ ಹರಡುವ ವೇಗದಷ್ಟೇ ವೇಗವಾಗಿ ಸುಳ್ಳು ಸುದ್ದಿ ಮತ್ತು ವದಂತಿಗಳೂ ಹರಡುತ್ತಿದ್ದು, ಇಂತಹ ಸಂದರ್ಭದಲ್ಲಿ ವಾಸ್ತವಾಂಶ ಪರಿಶೀಲಿಸಿ ಜವಾಬ್ದಾರಿಯುತವಾಗಿ ವರದಿ ಮಾಡುವ ಮೂಲಕ ಮಾಧ್ಯಮಗಳು ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಪಿಐಬಿ ಬೆಂಗಳೂರು ಹೆಚ್ಚುವರಿ ಮಹಾನಿರ್ದೇಶಕ ಜಿ.ಎಸ್. ರವೀಂದ್ರ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ, ಫಸಲ್ ಬಿಮಾ ಯೋಜನೆ, ಧನ ಧಾನ್ಯ ಕೃಷಿ ಯೋಜನೆ, ನಮೋ ಡ್ರೋನ್ ದೀದಿ, ಇ-ನ್ಯಾಮ್, ಮತ್ಸ್ಯ ಸಂಪದ ಯೋಜನೆ, ಸ್ಟಾರ್ಟ್‌ಅಪ್ ಹಾಗೂ ಸ್ಟೆಮ್ ಸೇರಿದಂತೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಶಿವಕುಮಾರ್, ಪಿಐಬಿ ಬೆಂಗಳೂರು ಸಹಾಯಕ ನಿರ್ದೇಶಕ ಮಧು, ಲಕ್ಷ್ಮೀಕಾಂತ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.