ಹಳಿಯಾಳ: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಹಳಿಯಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ 2023 ರಿಂದ ಜುಲೈ 2026 ರವರೆಗೆ 3 ವರ್ಷಗಳ ಉಚಿತ ವಿದ್ಯುತ್ ಸರಬರಾಜಿನ ವೆಚ್ಚ ರೂ.641.45 ಕೋಟಿಗಳನ್ನು ಸರ್ಕಾರವೇ ಭರಿಸಿದೆ. ಪ್ರಸ್ತುತ ನಡೆಯುತ್ತಿರುವ ಮನೆ-ಮನೆ ಪರಿಶೀಲನೆ ವೇಳೆ ಫಲಾನುಭವಿಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾರ್ವಜನಿಕರಿಂದ ದಾಖಲೆಗಳನ್ನು ಸಂಗ್ರಹಿಸುವ ಸಂದರ್ಭದಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಶಕ್ತಿ ಯೋಜನೆಯಡಿ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಗುತ್ತಿಗೆದಾರರಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ವಿವರಗಳು ಹಾಗೂ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಸರ್ವರ್ ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಪರಿಹಾರ ಕ್ರಮ ಕೈಗೊಳ್ಳಬೇಕು. ಯುವನಿಧಿ ಯೋಜನೆಯ ಅಂಕಿ-ಅಂಶಗಳನ್ನು ಪರಿಶೀಲಿಸಿ, ಅರ್ಹ ಯುವಕರಿಗೆ ಕೌಶಲ್ಯ ತರಬೇತಿ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟ ಫಲಾನುಭವಿಗಳ ಮಾಹಿತಿಯನ್ನು ಸರಿಪಡಿಸುವುದರ ಜೊತೆಗೆ, ಇದುವರೆಗೆ ಯೋಜನೆಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಬಕ್ಷ್ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ್ ಮುರ್ಡೇಶ್ವರ, ಪುರುಷೋತ್ತಮ ನಾಯ್ಕ, ಜನಾರ್ಧನ ದೇವಾಡಿಗ, ಹಳಿಯಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಲಾಸರಾಜ್ ಪ್ರಸನ್ನ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಭಾಗವಹಿಸಿದ್ದರು.