ಹಳಿಯಾಳ: ವ್ಯಕ್ತಿಯೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಶಣ್ಮುಖ ಅಂಕೊಲೆಕರ (35) ಎಂಬಾತನನ್ನು ಹಳಿಯಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸೆ.23ರಂದು ಸಂಜೆ ಸುಮಾರು 5.30ರ ವೇಳೆಗೆ ಹಳಿಯಾಳ ಶಹರದ ಸುಚಿತ್ರಾ ಬಾರ್ ಪಕ್ಕದ ಕುಸ್ತಿ ಅಖಾಡಕ್ಕೆ ತೆರಳುವ ರಸ್ತೆಯಲ್ಲಿ ಪಿರ್ಯಾದಿದಾರರು ತಮ್ಮ ಗೆಳೆಯ ಮಂಜುನಾಥ ಎಂಬುವರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಣ್ಮುಖ ಏಕಾಏಕಿ ಜಗಳ ತೆಗೆದು, ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪಿರ್ಯಾದಿದಾರರ ತಲೆಯ ಎಡಭಾಗ, ಎಡಕಿವಿ ಹಾಗೂ ಎಡಭುಜಕ್ಕೆ ಚುಚ್ಚಿ ಗಾಯಗೊಳಿಸಿದ ಘಟನೆ ನಡೆದಿತ್ತು.
ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸೆ.24ರಂದು ಬಿ.ಕೆ. ಹಳ್ಳಿ ರೋಡ್ ನಿವಾಸಿ ಶಣ್ಮುಖ ಅಂಕೊಲೆಕರನನ್ನು ವಶಕ್ಕೆ ಪಡೆದಿದ್ದಾರೆ.
ತನಿಖೆ ನಡೆಸಿದ ಬಳಿಕ ಆರೋಪಿತನನ್ನು ಸೂಕ್ತ ರಿಮಾಂಡ್ನೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಹಳಿಯಾಳ ಪೊಲೀಸ್ ಠಾಣೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಲಾಗಿದೆ.


