ಕೊಪ್ಪಳ: ಹಂಪಿ ಸಮೀಪ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಹತ್ಯೆ ಪ್ರಕರಣದಲ್ಲಿ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಫೆಬ್ರವರಿ 6ರಂದು ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಮೂವರನ್ನೂ ದೋಷಿಗಳೆಂದು ಘೋಷಿಸಿತ್ತು. ಅದರ ಮುಂದುವರಿದ ಕ್ರಮವಾಗಿ ಫೆಬ್ರವರಿ 16ರಂದು ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಅಪರಾಧಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಈ ಪ್ರಕರಣದಲ್ಲಿ ಕೇವಲ 9 ತಿಂಗಳಲ್ಲೇ ತೀರ್ಪು ಪ್ರಕಟವಾಗಿರುವುದು ವಿಶೇಷವಾಗಿದೆ. ಘಟನೆ 2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಅಮೆರಿಕದ ಪ್ರವಾಸಿಗನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು ಹಾಗೂ ಸ್ಥಳೀಯ ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿತ್ತು.
ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತ್ವರಿತ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಂತರ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಮೂವರನ್ನೂ ದೋಷಿಗಳೆಂದು ತೀರ್ಮಾನಿಸಿ ಇದೀಗ ಮರಣದಂಡನೆ ವಿಧಿಸಿದೆ.