ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಹೋಂಸ್ಟೇ ನೋಂದಣಿ ಮಾರ್ಗಸೂಚಿ–2025’ಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಈಗಾಗಲೇ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಡಾ. ರಾಮ್ ಪ್ರಸಾತ್ ಮನೋಹರ್ ಅವರು ನೀಡಿರುವ ಮಾಹಿತಿಯಂತೆ, ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಯೊಂದು ಹೋಂಸ್ಟೇಗೂ ಅಧಿಕೃತ ನೋಂದಣಿ ಕಡ್ಡಾಯವಾಗಿದೆ. ಇನ್ನೂ ನೋಂದಣಿ ಮಾಡಿಸದಿರುವ ಅರ್ಹ ಹೋಂಸ್ಟೇ ಮಾಲೀಕರು ಯಾವುದೇ ವಿಳಂಬ ಮಾಡದೆ ಅರ್ಜಿ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.
ನೋಂದಣಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಸುಮಾರು 400 ಅರ್ಜಿಗಳ ದಾಖಲಾತಿ ಪರಿಶೀಲನೆ ಪೂರ್ಣಗೊಂಡಿದ್ದು, ಪ್ರಸ್ತುತ ಸ್ಥಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ. ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಅಥವಾ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳನ್ನೊಳಗೊಂಡ ತಂಡವು ಪ್ರತಿ ಅರ್ಜಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕವೇ ನೋಂದಣಿ ಪ್ರಮಾಣಪತ್ರ ನೀಡಲಾಗುತ್ತದೆ.
ಈ ಪರಿಶೀಲನಾ ಪ್ರಕ್ರಿಯೆಯಲ್ಲಿ ಹೋಂಸ್ಟೇಯ ಮೂಲಸೌಕರ್ಯ, ಸ್ವಚ್ಛತೆ, ಭದ್ರತಾ ವ್ಯವಸ್ಥೆ ಹಾಗೂ ಕಾರ್ಯಾಚರಣೆಯ ಗುಣಮಟ್ಟ ಸೇರಿದಂತೆ ವಿವಿಧ ಅಂಶಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತದೆ. ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಕನಿಷ್ಠ ಮಾನದಂಡಗಳನ್ನು ಪೂರೈಸದ ಹೋಂಸ್ಟೇಗಳಿಗೆ ನೋಂದಣಿ ನೀಡಲಾಗುವುದಿಲ್ಲ. ಆದರೆ, ಅಗತ್ಯ ಲೋಪಗಳನ್ನು ಸರಿಪಡಿಸಿಕೊಂಡ ಬಳಿಕ ಮರು ಅರ್ಜಿ ಸಲ್ಲಿಸಲು ಅವಕಾಶವಿದೆ.
ಎಲ್ಲ ಹಂತಗಳ ಪರಿಶೀಲನೆ ಪೂರ್ಣಗೊಂಡು ಸಂಬಂಧಿತ ಪ್ರಾಧಿಕಾರದಿಂದ ಅನುಮೋದನೆ ದೊರೆತ ನಂತರ 45 ದಿನಗಳೊಳಗೆ ನೋಂದಣಿ ಪ್ರಮಾಣಪತ್ರ ವಿತರಿಸಲಾಗುತ್ತದೆ. ಈ ಪ್ರಮಾಣಪತ್ರವು ಐದು ವರ್ಷಗಳವರೆಗೆ ಮಾನ್ಯವಾಗಿದ್ದು, ಬಳಿಕ ನವೀಕರಣ ಕಡ್ಡಾಯವಾಗಿರುತ್ತದೆ.
ಹೊಸ ಮಾರ್ಗಸೂಚಿಯ ಮೂಲಕ ರಾಜ್ಯದ ಹೋಂಸ್ಟೇ ವಲಯವನ್ನು ನಿಯಮಬದ್ಧಗೊಳಿಸಿ, ಪ್ರವಾಸಿಗರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಸೇವೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ, ಇನ್ನೂ ನೋಂದಣಿ ಮಾಡಿಸದಿರುವ ಹೋಂಸ್ಟೇ ಮಾಲೀಕರು ಶೀಘ್ರವೇ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಮತ್ತೊಮ್ಮೆ ಮನವಿ ಮಾಡಿದೆ.