ಕಾರವಾರ: ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ-ಸಾಂಸ್ಕೃತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಜಿಲ್ಲೆಯ 5ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಪ್ರಶಸ್ತಿಗೆ 2008ರ ಆಗಸ್ಟ್ 1ರಂದು ಅಥವಾ ನಂತರ ಜನಿಸಿದ ಮಕ್ಕಳು ಅರ್ಹರಾಗಿದ್ದು, ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳಿಗೆ ತಲಾ 10 ಸಾವಿರ ರೂ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.
ಪ್ರಶಸ್ತಿಗೆ ಅಪ್ರತಿಮ ಪ್ರತಿಭೆ ಹೊಂದಿರುವ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ. ತಮ್ಮ ಸಾಧನೆಯನ್ನು ಸಮರ್ಥಿಸುವ ಪೂರಕ ದಾಖಲೆಗಳು, ದಿನಪತ್ರಿಕೆಗಳಲ್ಲಿ ಪ್ರಕಟವಾದ ವರದಿ ತುಣುಕುಗಳು, ಪ್ರಮಾಣಪತ್ರಗಳು ಹಾಗೂ ರಾಜ್ಯ, ರಾಷ್ಟ್ರ ಅಥವಾ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ವಿವರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಕನಿಷ್ಠ ಐದು ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿರುವ ಕುರಿತು ಸ್ವಯಂ ದೃಢೀಕರಣ ನೀಡಬೇಕು. ಮಕ್ಕಳ ವಯಸ್ಸಿನ ಪ್ರಮಾಣಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು ಕಡ್ಡಾಯವಾಗಿದೆ.
ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದಿರುವ ಮಕ್ಕಳಿಗೆ ಮತ್ತೆ ಪ್ರಶಸ್ತಿ ನೀಡಲು ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.
ಪ್ರಶಸ್ತಿಗೆ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಥವಾ ಕಾರವಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ತಲುಪಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.