Friday, July 24, 2026
Join WhatsApp Group
HomeLocal Newsಹೆಚ್‌ಪಿವಿ ಲಸಿಕೆ ನೀಡಿ, ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಿಸಿ

ಹೆಚ್‌ಪಿವಿ ಲಸಿಕೆ ನೀಡಿ, ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಿಸಿ

ಕಾರವಾರ: ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟಲು 14 ರಿಂದ 15 ವರ್ಷದ ಹೆಣ್ಣುಮಕ್ಕಳಿಗೆ ಹೆಚ್‌ಪಿವಿ(HPV) ಲಸಿಕೆ ನೀಡುವುದು ಅತ್ಯಂತ ಪರಿಣಾಮಕಾರಿ ಮುಂಜಾಗ್ರತಾ ಕ್ರಮವಾಗಿದ್ದು, ಜಿಲ್ಲೆಯ ಅರ್ಹ ಎಲ್ಲಾ ಹೆಣ್ಣುಮಕ್ಕಳಿಗೂ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೆಚ್‌ಪಿವಿ ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತದಲ್ಲಿ ಮಹಿಳೆಯರಲ್ಲಿ ಕಂಡುಬರುವ ಎರಡನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್‌ಗಳಲ್ಲಿ ಗರ್ಭಕಂಠದ ಕ್ಯಾನ್ಸರ್‌ ಪ್ರಮುಖವಾಗಿದ್ದು, ಇದನ್ನು ಮುಂಚಿತವಾಗಿ ತಡೆಯಲು ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ 14-15 ವರ್ಷದೊಳಗಿನ ಎಲ್ಲಾ ಹೆಣ್ಣುಮಕ್ಕಳ ಪೋಷಕರಿಗೆ ಶಿಕ್ಷಣ ಇಲಾಖೆಯ ಮೂಲಕ ಮಾಹಿತಿ ತಲುಪಿಸಬೇಕು. ಲಸಿಕೆಯ ಮಹತ್ವ, ಸುರಕ್ಷತೆ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲು ಗ್ರಾಮ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.

ಹೆಚ್‌ಪಿವಿ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಗಂಭೀರ ಅಡ್ಡ ಪರಿಣಾಮಗಳಿಲ್ಲವೆಂಬುದು ದೃಢಪಟ್ಟಿದೆ. ಆದ್ದರಿಂದ ಜಿಲ್ಲೆಯ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸುವ ಮೂಲಕ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್‌ ಅಪಾಯದಿಂದ ರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಲಸಿಕಾ ಕಾರ್ಯ ಆರಂಭವಾಗಿದ್ದು, ಅಗತ್ಯ ಪ್ರಮಾಣದ ಲಸಿಕೆ ಸಂಗ್ರಹ ಲಭ್ಯವಿದೆ ಎಂದರು.

ಅಭಿಯಾನ ರೂಪದಲ್ಲಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್‌ಗಳು ಆರೋಗ್ಯ ಇಲಾಖೆಗೆ ಅಗತ್ಯ ಸಹಕಾರ ನೀಡಿ ಜಿಲ್ಲೆಯ ಅರ್ಹ ಎಲ್ಲಾ ಹೆಣ್ಣುಮಕ್ಕಳಿಗೂ ಲಸಿಕೆ ತಲುಪಿಸಿ ಶೇ.100 ಪ್ರಗತಿಸಾಧಿಸಬೇಕು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ ಜಿಲ್ಲೆಯಲ್ಲಿ ದಡಾರ ಮತ್ತು ರೂಬೆಲ್ಲಾ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಲಸಿಕಾ ಅಭಿಯಾನವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ಶಶಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಡಾ. ಕೆ. ರಮೇಶ್ರಾವ್, ಡಾ. ಹರ್ಷಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share