Friday, October 23, 2026
HomeLocal Newsಕಾರವಾರ ನೌಕಾನೆಲೆಯಲ್ಲಿ ಅ.16ಕ್ಕೆ ʻಐಎನ್‌ಎಸ್ ಸಮರ್ಥಕ್ʼ ಸೇರ್ಪಡೆ

ಕಾರವಾರ ನೌಕಾನೆಲೆಯಲ್ಲಿ ಅ.16ಕ್ಕೆ ʻಐಎನ್‌ಎಸ್ ಸಮರ್ಥಕ್ʼ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹುಉದ್ದೇಶದ ಯುದ್ಧನೌಕೆ ಐಎನ್‌ಎಸ್ ಸಮರ್ಥಕ್ ಅ. 16ರಂದು ಕಾರವಾರದ ನೌಕಾನೆಲೆಯಲ್ಲಿ ಅಧಿಕೃತವಾಗಿ ನೌಕಾಪಡೆಗೆ ಸೇರ್ಪಡೆಗೊಳ್ಳಲಿದೆ.

ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್, ಹಿರಿಯ ನೌಕಾಪಡೆ ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳು, ಗಣ್ಯರು ಹಾಗೂ ಲಾರ್ಸನ್ ಅಂಡ್ ಟೂಬ್ರೊ (ಎಲ್‌ ಆ್ಯಂಡ್‌ ಟಿ) ಸಂಸ್ಥೆಯ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ವಾರ್ತಾ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದಡಿ ತಮಿಳುನಾಡಿನ ಕಟ್ಟುಪಳ್ಳಿಯಲ್ಲಿರುವ ಎಲ್‌ ಆ್ಯಂಡ್‌ ಟಿ ಸಂಸ್ಥೆ ಈ ಯುದ್ಧನೌಕೆಯನ್ನು ನಿರ್ಮಿಸಿದೆ. ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳ್ಳಲಿರುವ ನಾಲ್ಕು ಬಹುಉದ್ದೇಶದ ನೌಕೆಗಳ ಪೈಕಿ ಐಎನ್‌ಎಸ್ ಸಮರ್ಥಕ್ ಮೊದಲನೆಯದು. ಇದರ ಸೇರ್ಪಡೆ ದೇಶದ ರಕ್ಷಣಾ ಕ್ಷೇತ್ರದ ಸ್ವಾವಲಂಬನೆಯ ಪ್ರಯತ್ನದಲ್ಲಿ ಮಹತ್ವದ ಹೆಜ್ಜೆಯಾಗಲಿದೆ.

ಸಮುದ್ರ ಕಣ್ಗಾವಲು ಮತ್ತು ಗಸ್ತು ಕಾರ್ಯಾಚರಣೆಗಳಿಗಾಗಿ ವಿನ್ಯಾಸಗೊಳಿಸಲಾದ ಈ ನೌಕೆಯು ಕಡಿಮೆ ತೀವ್ರತೆಯ ಸಮುದ್ರ ಕಾರ್ಯಾಚರಣೆ, ಗುರಿ ನಿಯೋಜನೆ ಹಾಗೂ ವಿವಿಧ ವ್ಯವಸ್ಥೆಗಳ ಪರೀಕ್ಷೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಮಾನವ ರಹಿತ ಮತ್ತು ಸ್ವಾಯತ್ತ ವ್ಯವಸ್ಥೆಗಳಿಗೆ ಮಾತೃ ನೌಕೆಯಾಗಿಯೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

ಮಾನವೀಯ ನೆರವು, ವಿಪತ್ತು ಪರಿಹಾರ, ರಕ್ಷಣಾ ಕಾರ್ಯಾಚರಣೆ, ಮುಳುಗಿದ ವಸ್ತುಗಳ ಪತ್ತೆ ಹಾಗೂ ರಕ್ಷಣಾ ಕಾರ್ಯಗಳಲ್ಲಿಯೂ ಬಳಸಬಹುದಾಗಿದೆ. ಅಗತ್ಯ ಸಂದರ್ಭಗಳಲ್ಲಿ ಆಸ್ಪತ್ರೆ ನೌಕೆಯಾಗಿಯೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಸವಾಲಿನ ಸಮುದ್ರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಸ್ವದೇಶಿ ಸಂವೇದಕಗಳು, ಶಸ್ತ್ರಾಸ್ತ್ರಗಳು ಮತ್ತು ಎಲೆಕ್ಟ್ರಾನಿಕ್ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.

100 ಮೀಟರ್‌ಗಿಂತಲೂ ಹೆಚ್ಚು ಉದ್ದವಿರುವ ಐಎನ್‌ಎಸ್ ಸಮರ್ಥಕ್ ಸುಮಾರು 5,000 ಟನ್ ತೂಕ ಹೊಂದಿದೆ. 7,200 ನಾಟಿಕಲ್ ಮೈಲುಗಳಿಗಿಂತಲೂ ಅಧಿಕ ದೂರ ಕ್ರಮಿಸುವ ಸಾಮರ್ಥ್ಯವಿರುವ ಈ ನೌಕೆಯು ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ.

ಬಹುಉದ್ದೇಶದ ಹಾಗೂ ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿ ನೌಕೆಯಾಗಿರುವ ಸಮರ್ಥಕ್, ಗುರಿ ನಿಯೋಜನೆ, ಸಿಬ್ಬಂದಿ ತರಬೇತಿ, ಸಮುದ್ರ ಕಣ್ಗಾವಲು, ಸರಕು ಸಾಗಣೆ ಮತ್ತು ಅಗತ್ಯ ನೆರವು ಒದಗಿಸುವ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದೆ. ಇದರಿಂದ ವಿಧ್ವಂಸಕ ನೌಕೆಗಳು, ಯುದ್ಧನೌಕೆಗಳು ಹಾಗೂ ವಿಮಾನವಾಹಕ ನೌಕೆಗಳಂತಹ ಪ್ರಮುಖ ಸಮರ ನೌಕೆಗಳನ್ನು ಅವುಗಳ ಮುಖ್ಯ ಕಾರ್ಯಾಚರಣೆಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗಲಿದೆ.

ನೌಕೆಯ ಲಾಂಛನದಲ್ಲಿ ಆಕ್ರಮಣಕಾರಿ ಭಂಗಿಯಲ್ಲಿರುವ ಭಾರತೀಯ ಆನೆಯ ಚಿತ್ರವಿದ್ದು, ಅದು ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯವನ್ನು ಪ್ರತಿನಿಧಿಸುತ್ತದೆ. ನೌಕೆಯ ಸಿಬ್ಬಂದಿಯನ್ನು ‘ಪ್ರಚಂಡ ಪುಂಡರೀಕರು’ ಎಂದು ಕರೆಯಲಾಗುತ್ತದೆ. ಪುರಾಣಗಳಲ್ಲಿ ಉಲ್ಲೇಖವಾಗಿರುವ ಅಷ್ಟದಿಗ್ಗಜಗಳಲ್ಲಿ ಪುಂಡರೀಕನೂ ಒಬ್ಬನಾಗಿದ್ದು, ದಕ್ಷಿಣ-ಪೂರ್ವ ದಿಕ್ಕಿನ ರಕ್ಷಕನೆಂದು ಪರಿಗಣಿಸಲಾಗಿದೆ.

ಯಾವುದೇ ಕಾರ್ಯವನ್ನು ಯಾವುದೇ ಸಮಯದಲ್ಲಿ ನಿರ್ವಹಿಸಲು ಸಿದ್ಧವಾಗಿರುವುದು ಹಾಗೂ ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸುವ ಸಾಮರ್ಥ್ಯ ಐಎನ್‌ಎಸ್ ಸಮರ್ಥಕ್‌ನ ಪ್ರಮುಖ ವೈಶಿಷ್ಟ್ಯಗಳಾಗಿವೆ ಎಂದು ನೌಕಾಪಡೆಯ ಪ್ರಕಟಣೆ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share