Monday, September 7, 2026
Join WhatsApp Group
HomeLocal Newsಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಗೆ ಮೇಜರ್ ಸರ್ಜರಿ

ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆಗೆ ಮೇಜರ್ ಸರ್ಜರಿ

ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸಂಸದ ಕಾಗೇರಿ ಸೂಚನೆ

ಶಿರಸಿ: ಜಿಲ್ಲೆಯಾದ್ಯಂತ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಸಮಸ್ಯೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಿಎಸ್‌ಎನ್‌ಎಲ್‌ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಶಿರಸಿಯ ತಮ್ಮ ಕಚೇರಿಯಲ್ಲಿ ಬಿಎಸ್‌ಎನ್‌ಎಲ್‌ ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಬೋರಾಲೇ ಹೇಮಂತ್ ಸದಾಶಿವ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದರು, ಜಿಲ್ಲೆಯಲ್ಲಿರುವ ಟವರ್‌ಗಳ ನಿರ್ವಹಣೆ ಹಾಗೂ ಹೊಸ ಟವರ್‌ಗಳ ನಿರ್ಮಾಣದಲ್ಲಿ ಎದುರಾಗುತ್ತಿರುವ ತೊಡಕುಗಳನ್ನು ಶೀಘ್ರವಾಗಿ ನಿವಾರಿಸುವಂತೆ ಸೂಚಿಸಿದರು.

ರಾಜ್ಯದಲ್ಲೇ ಅತಿ ಹೆಚ್ಚು ಬಿಎಸ್‌ಎನ್‌ಎಲ್‌ ಟವರ್‌ಗಳು ಉತ್ತರ ಕನ್ನಡ ಜಿಲ್ಲೆಯಲ್ಲಿವೆ. ಆದರೆ ಹಲವು ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಟವರ್‌ಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಟವರ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿ ಹಾಗೂ ನಿರ್ವಹಣೆಯ ಪ್ರಗತಿ ಕುರಿತು ಪ್ರತಿ ತಿಂಗಳು ಸಮಗ್ರ ವರದಿ ಸಲ್ಲಿಸುವಂತೆ ಸಂಸದರು ನಿರ್ದೇಶನ ನೀಡಿದರು. ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ತಂತ್ರಜ್ಞರು ಹಾಗೂ ಯಂತ್ರೋಪಕರಣಗಳು ಜಿಲ್ಲೆಯಲ್ಲೇ ಸದಾ ಲಭ್ಯವಿರುವ ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲೆಯ ಹಲವು ಬಿಎಸ್‌ಎನ್‌ಎಲ್‌ ಟವರ್‌ಗಳು ಇನ್ನೂ 4ಜಿ ಉನ್ನತೀಕರಣಗೊಳ್ಳಬೇಕಿದ್ದು, ಅಗತ್ಯ ಸಲಕರಣೆಗಳನ್ನು ತಕ್ಷಣ ತರಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು. ಈ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಮಾತ್ರವಲ್ಲದೆ ಬೆಂಗಳೂರು ಹಾಗೂ ನವದೆಹಲಿಯ ಉನ್ನತ ಅಧಿಕಾರಿಗಳೊಂದಿಗೂ ಈಗಾಗಲೇ ಚರ್ಚಿಸಲಾಗಿದೆ ಎಂದು ಕಾಗೇರಿ ತಿಳಿಸಿದರು.

ಇನ್ನು ‘4ಜಿ ಸ್ಯಾಚುರೇಶನ್’ ಯೋಜನೆಯಡಿ ನಿರ್ಮಾಣಗೊಂಡಿರುವ ಟವರ್‌ಗಳಿಗೆ ಕೂಡಲೇ ಡ್ರೈವ್ ಟೆಸ್ಟ್ ನಡೆಸಿ, ಟವರ್‌ಗಳ ಸಿಗ್ನಲ್ ಕೊನೆಯ ಹಂತದವರೆಗೂ ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದನ್ನು ಸ್ಥಳದಲ್ಲೇ ಪರಿಶೀಲಿಸುವಂತೆ ಸೂಚಿಸಲಾಯಿತು.

ಜಿಲ್ಲೆಯ ಜನರಿಗೆ ಉತ್ತಮ ನೆಟ್‌ವರ್ಕ್ ಸೇವೆ ದೊರೆಯುವವರೆಗೂ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸುವುದಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share