Friday, October 23, 2026
HomeLocal Newsಪರಿಸರ ಮಾರಕ ಯೋಜನೆಗಳ DPR ಕೇಂದ್ರಕ್ಕೆ ಕಳುಹಿಸಬೇಡಿ: ಕಾಗೇರಿ

ಪರಿಸರ ಮಾರಕ ಯೋಜನೆಗಳ DPR ಕೇಂದ್ರಕ್ಕೆ ಕಳುಹಿಸಬೇಡಿ: ಕಾಗೇರಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಉದ್ದೇಶಿಸಿರುವ ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ಜೋಡಣೆ ಹಾಗೂ ಶರಾವತಿ ಪಂಪ್‌ ಸ್ಟೋರೇಜ್ ಯೋಜನೆಗಳ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬಾರದು. ಪಶ್ಚಿಮ ಘಟ್ಟಗಳ ಧಾರಣ ಸಾಮರ್ಥ್ಯದ ಕುರಿತು ತಜ್ಞರಿಂದ ವೈಜ್ಞಾನಿಕ ಅಧ್ಯಯನ ನಡೆಸಿದ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಕಾಗೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಹಲವು ಯೋಜನೆಗಳಿಂದ ಪರಿಸರ ಹಾಗೂ ಜನಜೀವನದ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಮತ್ತಷ್ಟು ಬೃಹತ್ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವುದರಿಂದ ಪಶ್ಚಿಮ ಘಟ್ಟಗಳ ಪರಿಸರಕ್ಕೆ ಹಾನಿಯಾಗುವುದರ ಜೊತೆಗೆ ಸ್ಥಳೀಯರ ಜೀವನೋಪಾಯಕ್ಕೂ ತೊಂದರೆಯಾಗಲಿದೆ ಎಂಬುದು ಜಿಲ್ಲೆಯ ಜನರ ಆತಂಕವಾಗಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಜನರು ಸಣ್ಣ ಮತ್ತು ಅತಿ ಸಣ್ಣ ಕೃಷಿಕರಾಗಿದ್ದು, ಕೃಷಿಯನ್ನೇ ಜೀವನೋಪಾಯಕ್ಕೆ ಅವಲಂಬಿಸಿದ್ದಾರೆ. ಬೃಹತ್ ಯೋಜನೆಗಳಿಂದ ಕೃಷಿ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ. ಜಿಲ್ಲೆಯ ಜೀವನದಿಗಳನ್ನು ಅವಲಂಬಿಸಿರುವ ಮೀನುಗಾರಿಕೆಯ ಮೇಲೂ ಇಂತಹ ಯೋಜನೆಗಳು ಗಂಭೀರ ಪರಿಣಾಮ ಬೀರಬಹುದು ಎಂದು ಕಾಗೇರಿ ತಿಳಿಸಿದ್ದಾರೆ.

ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಧಾರಣ ಸಾಮರ್ಥ್ಯ (Carrying Capacity) ಕುರಿತು ತಜ್ಞ ವಿಜ್ಞಾನಿಗಳಿಂದ ವೈಜ್ಞಾನಿಕ ಅಧ್ಯಯನ ನಡೆಸಬೇಕೆಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಆದ್ದರಿಂದ ಸರ್ಕಾರ ಕೂಡಲೇ ಈ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಅಧ್ಯಯನದ ವರದಿ ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರಕ್ಕೆ ಹಾನಿಕಾರಕ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು ಎಂಬುದು ಜಿಲ್ಲೆಯ ಜನರ ಹಾಗೂ ತಮ್ಮ ಸ್ಪಷ್ಟ ನಿಲುವಾಗಿದೆ ಎಂದು ಕಾಗೇರಿ ಹೇಳಿದ್ದಾರೆ.

ಈ ಯೋಜನೆಗಳ ವಿರುದ್ಧ ಜಿಲ್ಲೆಯ ಪೂಜ್ಯ ಮಠಾಧೀಶರುಗಳ ಮಾರ್ಗದರ್ಶನದಲ್ಲಿ ನಿರಂತರ ಹೋರಾಟಗಳು ನಡೆಯುತ್ತಿದ್ದು, ಬೆಂಗಳೂರಿನಲ್ಲಿಯೂ ಪ್ರತಿಭಟನೆಗಳು ನಡೆದಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜನಹಿತ ಮತ್ತು ಪರಿಸರ ರಕ್ಷಣೆಯ ದೃಷ್ಟಿಯಿಂದ ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ಜೋಡಣೆ ಹಾಗೂ ಶರಾವತಿ ಪಂಪ್‌ ಸ್ಟೋರೇಜ್ ಯೋಜನೆಗಳ DPR ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಸಂಸದ ಕಾಗೇರಿ ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share