ನವದೆಹಲಿ: ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ನೂತನ ರೈಲು ಮಾರ್ಗ ಯೋಜನೆಗೆ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಯೋಜನೆಯ ಅನುಷ್ಠಾನಕ್ಕೆ ಯಾವುದೇ ಗೊಂದಲ ಉಂಟಾಗದಂತೆ ಶೀಘ್ರವಾಗಿ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಜೊತೆಗೆ, ರೈಲ್ವೆ ಮಂಡಳಿಯಿಂದ ಈ ನೂತನ ಮಾರ್ಗಕ್ಕೆ ಅಗತ್ಯ ಮಂಜೂರಾತಿ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಸಚಿವರ ಗಮನಕ್ಕೆ ತಂದರು.
ಈ ವೇಳೆ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಯೋಜನೆ ಕುರಿತು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ತಾಳಗುಪ್ಪ–ಶಿರಸಿ–ಹುಬ್ಬಳ್ಳಿ ರೈಲು ಮಾರ್ಗವು ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಯೋಜನೆ ಜಾರಿಯಾದರೆ ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಒಳನಾಡು ಭಾಗಕ್ಕೆ ರೈಲು ಸಂಪರ್ಕ ಕಲ್ಪಿಸುವ ಜೊತೆಗೆ ವ್ಯಾಪಾರ, ಪ್ರವಾಸೋದ್ಯಮ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೊಸ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.