ಸಿದ್ದಾಪುರ: ಸ್ಥಳೀಯ ಶಾಸಕರಾದ ಭೀಮಣ್ಣ ನಾಯ್ಕ ಅವರು ತಾಲೂಕಿನ ಕಾನಸೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿಯ ವೇಳೆ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣೆ ಸಮಿತಿ (SDMC) ಪದಾಧಿಕಾರಿಗಳು ಹಾಗೂ ಶಿಕ್ಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಶಾಸಕರು, ಶಾಲೆಯ ಸ್ಥಿತಿಗತಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಶಾಲೆಯ ಹಳೆಯ ಕಟ್ಟಡವನ್ನು ಖುದ್ದಾಗಿ ವೀಕ್ಷಿಸಿ, ಅದರ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ, SDMC ಹಾಗೂ ಗ್ರಾಮಸ್ಥರು ನೀಡಿದ ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ಭೀಮಣ್ಣ ನಾಯ್ಕ, ಶಾಲೆಯ ಹಳೆಯ ಕಟ್ಟಡದ ದುರಸ್ತಿ ಅಥವಾ ನೂತನ ಕೊಠಡಿಗಳ ನಿರ್ಮಾಣ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ SDMC ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.