ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 28ರಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಪರೀಕ್ಷೆಗೆ KSEAB ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಈ ಬಾರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಂದ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 1,217 ಸುಸಜ್ಜಿತ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.
ಪರೀಕ್ಷಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದೇ ವೇಳೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿದ್ದ ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇ.35ರಿಂದ ಶೇ.30ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಭಯ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪರೀಕ್ಷೆ ಸಮೀಪಿಸುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳು ಹರಿದಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿರುವ KSEAB ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ, ಅಂತರ್ಜಾಲದಲ್ಲಿ ಹರಿದಾಡುತ್ತಿರುವವು ಸಂಪೂರ್ಣ ನಕಲಿ ಎಂದು ತಿಳಿಸಿದ್ದಾರೆ. ಇಂತಹ ವದಂತಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಿವಿಗೊಡಬಾರದು. ಸೈಬರ್ ಪೊಲೀಸರ ಮೂಲಕ ನಿಗಾ ವಹಿಸಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.