Thursday, July 23, 2026
Join WhatsApp Group
HomeStateಭಾರತದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಕರ್ನಾಟಕದಲ್ಲಿ!

ಭಾರತದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಕರ್ನಾಟಕದಲ್ಲಿ!

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ (BIEC)ದಲ್ಲಿ ನಡೆದ Google I/O Connect India 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯವನ್ನು AI-Native State ಆಗಿ ರೂಪಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಪ್ರಕಟಿಸಿದರು.

ಈ ಯೋಜನೆಯಡಿ ಶಿಕ್ಷಣ, ಸಂಶೋಧನೆ, ಕೈಗಾರಿಕೆ ಹಾಗೂ ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಉದ್ದೇಶದಿಂದ ಜಾಗತಿಕ ಮಟ್ಟದ ಪ್ರತಿಭೆಗಳನ್ನು ರೂಪಿಸುವ AI ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತದೆ. ಇದರ ಜೊತೆಗೆ ಸ್ಟಾರ್ಟ್‌ಅಪ್‌ಗಳು, ತಂತ್ರಜ್ಞಾನ ಕಂಪನಿಗಳು ಹಾಗೂ ಸಂಶೋಧಕರಿಗಾಗಿ ಅತ್ಯಾಧುನಿಕ AI Hub ಇನ್‌ಕ್ಯುಬೇಶನ್ ಕೇಂದ್ರವನ್ನೂ ಆರಂಭಿಸಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಿಗೆ AI ಆಧಾರಿತ ಬೋಧನಾ ಸಹಾಯಕ ಸಾಧನಗಳು, ಆರೋಗ್ಯ ಕ್ಷೇತ್ರದಲ್ಲಿ ಕಾಯಿಲೆಗಳ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆ, ಕೃಷಿಯಲ್ಲಿ ರೈತರಿಗೆ ನೈಜ ಸಮಯದ ಸಲಹೆಗಳು, ಸಾರ್ವಜನಿಕ ಸೇವೆಗಳ ವೇಗವರ್ಧನೆ ಹಾಗೂ ಸ್ಥಳೀಯ ಸಣ್ಣ ಉದ್ಯಮಗಳನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವಂತೆ ಮಾಡಲು AI ತಂತ್ರಜ್ಞಾನವನ್ನು ಬಳಸಲಾಗುವುದು ಎಂದು ವಿವರಿಸಿದರು.

ಈ ವೇಳೆ ಗೂಗಲ್ ಸಂಸ್ಥೆಯೊಂದಿಗೆ ಇನ್ನಷ್ಟು ಸಹಭಾಗಿತ್ವಕ್ಕೆ ಆಹ್ವಾನ ನೀಡಿದ ಮುಖ್ಯಮಂತ್ರಿ, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಣ್ಣ ಉದ್ಯಮಗಳಿಗೆ ಸ್ಥಳೀಯ ಅಗತ್ಯಗಳಿಗೆ ತಕ್ಕ AI ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡುವುದು, ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ ಅವಕಾಶ ಕಲ್ಪಿಸುವುದು, ಜವಾಬ್ದಾರಿಯುತ AI ಪ್ರಯೋಗಾಲಯ ಸ್ಥಾಪಿಸುವುದು ಹಾಗೂ ರಾಜ್ಯದ ಡಿಜಿಟಲ್ ಮೂಲಸೌಕರ್ಯದಲ್ಲಿ ದೀರ್ಘಾವಧಿಯ ಹೂಡಿಕೆ ಮಾಡುವಂತೆ ಮನವಿ ಮಾಡಿದರು.

ಕರ್ನಾಟಕವು ಭಾರತದ ಸಾಫ್ಟ್‌ವೇರ್ ರಫ್ತಿನಲ್ಲಿ ಸುಮಾರು ಶೇ.40ರಷ್ಟು ಕೊಡುಗೆ ನೀಡುತ್ತಿದ್ದು, ಬೆಂಗಳೂರು 17 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಹಾಗೂ ಸಾವಿರಾರು ಜಾಗತಿಕ ಸಾಮರ್ಥ್ಯ ಕೇಂದ್ರಗಳ ನೆಲೆಯಾಗಿದೆ ಎಂದು ಅವರು ಹೇಳಿದರು.

ಡೆವಲಪರ್‌ಗಳು ಹೊಸ ಆವಿಷ್ಕಾರಗಳನ್ನು ನಿರ್ಮಿಸಲಿ, ಉದ್ಯಮಿಗಳು ದೊಡ್ಡ ಕನಸು ಕಾಣಲಿ, ಸಂಶೋಧಕರು ಹೊಸ ಸಂಶೋಧನೆಗಳನ್ನು ಮುಂದುವರಿಸಲಿ, ವಿದ್ಯಾರ್ಥಿಗಳು ನಿರಂತರವಾಗಿ ಕಲಿಯಲಿ. ಕರ್ನಾಟಕದಲ್ಲಿ AI ಅಭಿವೃದ್ಧಿ ನಾವೀನ್ಯತೆ, ಒಳಗೊಳ್ಳುವಿಕೆ ಮತ್ತು ವಿಶ್ವಾಸಾರ್ಹತೆಯೊಂದಿಗೆ ಸಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share