ಕಾರವಾರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಪಾರದರ್ಶಕವಾಗಿ ಮತ್ತು ಸುಗಮವಾಗಿ ನಡೆಯುತ್ತಿರುವ ಕುರಿತಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಕಾರವಾರದ ಸೈಂಟ್ ಮೈಕಲ್ ಮತ್ತು ಹಿಂದೂ ಹೈಸ್ಕೂಲ್ ಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿರುವ ಕುರಿತು ಪರಿಶೀಲಿಸಿದರು. ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಿಕ್ಷಕರಿಗೆ ತಿಳಿಸಿದ ಅವರು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪ್ರೋತ್ಸಾಹಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕೊಠಡಿಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನ ವೆಬ್ ಕಾಸ್ಟಿಂಗ್ ವ್ಯವಸ್ಥೆಯ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಡಿಡಿಪಿಐ ಲತಾ ನಾಯಕ್ ಮತ್ತಿತರರು ಇದ್ದರು.