ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಪರೀಕ್ಷೆ ಕರ್ತವ್ಯಕ್ಕೆ ನಿಯೋಜಸಿರುವ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪರೀಕ್ಷೆ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದ್ವಿತೀಯ ಪಿಯು ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿಯ ಜಿಲ್ಲೆಯಲ್ಲಿ 5939 ಬಾಲಕರು ಮತ್ತು 8545 ಬಾಲಕಿಯರು ಸೇರಿದಂತೆ ಒಟ್ಟು 14484 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು ಸಂಪೂರ್ಣ ಜವಾಬ್ದಾರಿ ಹೊಂದಿದ್ದು, ನಿಯಮಗಳಲ್ಲಿ ಸೂಚಿಸಿರುವಂತೆ ಯಾವುದೇ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿನ ಸೂಕ್ಷ್ಮ ಪರೀಕ್ಷೆ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಪರೀಕ್ಷಾ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಮತ್ತು ಯಾವುದೇ ರೀತಿಯ ಪರೀಕ್ಷಾ ಅವ್ಯವಹಾರಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.
ವಾಟ್ಸಪ್, ಇನ್ಸ್ಟಾಗ್ರಾಮ್ ಇತರೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗಳಂತಹ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಕಿವಿಗೊಡಬಾರದು. ಇಂತಹ ವದಂತಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ, ಜಿ. ಪಿ. ಎಸ್ ಅಳವಡಿಸಿದ ವಾಹನಗಳ ಮೂಲಕ ಪರೀಕ್ಷೆ ಕೇಂದ್ರಗಳಿಗೆ ತಲುಪಿಸಲು ಹಾಗೂ ಎಲ್ಲಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವoತೆ ಸೂಚಿಸಿದರು.
ಪ್ರಾಧಿಕಾರದ ಮಾರ್ಗಸೂಚಿಯಂತೆ ಪರೀಕ್ಷೆಗಳನ್ನು ಸಿಸಿಟಿವಿ ಕಣ್ಗಾವಲುನಲ್ಲಿ ನಡೆಸಬೇಕು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆ ಮಾಡಬೇಕು. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ಫೋನ್, ಮೈಕ್ರೋಫೋನ್, ಬ್ಲೂಟೂತ್ ಸಾಧನ ಅನುಮತಿಸಲಾಗುವುದಿಲ್ಲ. ಸಿಬ್ಬಂದಿಗಳು ಮೊಬೈಲ್ ಬಳಕೆಗೂ ಅವಕಾಶವಿಲ್ಲ, ಫೋಟೋಗ್ರಾಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತಗೊಳಿಸದಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿದ್ಯಾರ್ಥಿಗಳಿಗೆ ಬಸ್ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಬಸ್ಗಳ ವ್ಯವಸ್ಥೆಯನ್ನು ಮಾಡುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಹಾಗೂ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಅಧಿಕಾರಿಗಳು ಇದ್ದರು.