Saturday, September 19, 2026
Join WhatsApp Group
HomeLocal Newsಕಸ್ತೂರಿ ರಂಗನ್ ವರದಿ: ಗ್ರಾಮ ಸಭೆ ಕರೆದು ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯ

ಕಸ್ತೂರಿ ರಂಗನ್ ವರದಿ: ಗ್ರಾಮ ಸಭೆ ಕರೆದು ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯ

ಕಾರವಾರ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ 7ನೇ ಅಧಿಸೂಚನೆ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ತುರ್ತು ಗ್ರಾಮ ಸಭೆ ಕರೆದು ಜನಾಭಿಪ್ರಾಯ ಸಂಗ್ರಹಿಸಬೇಕು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಈ ಕುರಿತು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರನ್ನು ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 567 ಹಳ್ಳಿಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದ್ದು, ಜಿಲ್ಲೆಯ 138 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ಹಳ್ಳಿಗಳು ಒಳಗೊಂಡಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳ ನಿರ್ಣಯವು ಮಹತ್ವದ್ದಾಗಿರುವುದರಿಂದ, ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆ ಕರೆದು ಸ್ಥಳೀಯ ಜನರ ಅಭಿಪ್ರಾಯವನ್ನು ದಾಖಲಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾದ ಗ್ರಾಮಗಳ ಜನಜೀವನ, ಕೃಷಿ, ಅರಣ್ಯ ಅವಲಂಬಿತ ಬದುಕು ಸೇರಿದಂತೆ ಜನಸಾಮಾನ್ಯರ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸುವಂತೆಯೂ ಜಿಲ್ಲಾಧಿಕಾರಿಗಳಿಗೆ ನೀಡಿದ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾ ಸಂಚಾಲಕ ರಾಜೇಶ್ ಮಿತ್ರ ನಾಯ್ಕ ತೆಂಗಿನಕೇರಿ, ಕುಮಟಾ ತಾಲೂಕು ಅಧ್ಯಕ್ಷ ಮಂಜುನಾಥ ಮರಾಠಿ, ಮಾದೇವ ನಾಯ್ಕ, ಸಂಚಾಲಕ ವಿಜು ಪಿಳ್ಳೆ, ಉದಯ ಗುನಗಾ, ಶಂಕರ್ ನಾಯ್ಕ ಹೊಸಗದ್ದೆ, ಸಂದೇಶ ನಾಯ್ಕ ಬ್ರಹ್ಮೂರು, ಶಂಕರ ಕೊಡಿಯಾ ಅಚವೆ, ಮಾಬ್ಲೇಶ್ವರ ಶೆರುಗಾರ, ವಿಘ್ನೇಶ ಬೋರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share