Saturday, May 30, 2026
HomeUncategorizedಮುಂಗಾರು ಸಿದ್ಧತೆಗೆ ಒತ್ತು: ರೈತರಿಗೆ ರಸಗೊಬ್ಬರ–ಬೀಜಗಳ ಸಮರ್ಪಕ ವಿತರಣೆ ಮಾಡಿರಿ — ಕೆ. ವೆಂಕಟೇಶ್ ಸೂಚನೆ

ಮುಂಗಾರು ಸಿದ್ಧತೆಗೆ ಒತ್ತು: ರೈತರಿಗೆ ರಸಗೊಬ್ಬರ–ಬೀಜಗಳ ಸಮರ್ಪಕ ವಿತರಣೆ ಮಾಡಿರಿ — ಕೆ. ವೆಂಕಟೇಶ್ ಸೂಚನೆ

ಮುಂಗಾರು ಹಂಗಾಮಿಗೆ ಪೂರ್ವಸಿದ್ಧತೆ: ರೈತರಿಗೆ ಅಗತ್ಯ ವಸ್ತುಗಳ ಸರಬರಾಜಿಗೆ ಕಟ್ಟುನಿಟ್ಟಿನ ಸೂಚನೆ

ಮೈಸೂರು: ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆ ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ಹಾಗೂ ಸಮಯಕ್ಕೆ ಸರಿಯಾಗಿ ವಿತರಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ವಿತರಣೆ ಮಾಡುವುದರಿಂದ ರೈತರಿಗೆ ನಿಖರ ಪ್ರಮಾಣದಲ್ಲಿ ಮತ್ತು ಸಮಂಜಸ ಬೆಲೆಯಲ್ಲಿ ದೊರಕುವಂತಾಗುತ್ತದೆ ಎಂದರು. ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದ ಸಚಿವರು, ಕಚೇರಿಗಳಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರೊಂದಿಗೆ ನೇರವಾಗಿ ಸಂವಾದ ನಡೆಸಬೇಕು ಎಂದು ಹೇಳಿದರು. ರೇಷ್ಮೆ ಹಾಗೂ ಸಿರಿಧಾನ್ಯ ಬೆಳೆಗಳ ಲಾಭದ ಬಗ್ಗೆ ಅರಿವು ಮೂಡಿಸಿ, ತಂಬಾಕಿಗೆ ಪರ್ಯಾಯವಾಗಿ ಈ ಬೆಳೆಗಳನ್ನು ಉತ್ತೇಜಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ, ಅವುಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು. ಅಕ್ರಮ ಮದ್ಯ ಮಾರಾಟದ ಬಗ್ಗೆ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ನಿಯಮ ಉಲ್ಲಂಘಿಸುವ ಅಂಗಡಿಗಳ ಪರವಾನಿಗೆ ರದ್ದುಗೊಳಿಸುವಂತೆ ನಿರ್ದೇಶನ ನೀಡಿದರು.

ತಾಲೂಕಿನಲ್ಲಿ 3.18 ಲಕ್ಷ ಕ್ವಿಂಟಲ್ ರಾಗಿ ಮಾರಾಟಕ್ಕೆ ರೈತರು ನೋಂದಣಿ ಮಾಡಿಕೊಂಡಿದ್ದರೂ, ಇದುವರೆಗೆ ಕೇವಲ ಶೇ.50ರಷ್ಟು ಮಾತ್ರ ಮಾರಾಟವಾಗಿರುವುದನ್ನು ಪ್ರಶ್ನಿಸಿದ ಅವರು, ಖಾಸಗಿ ಖರೀದಿದಾರರು ನೋಂದಾಯಿತ ರೈತರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕುರಿತು ಬಂದಿರುವ ದೂರುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಹೇಳಿದರು.

ರಾವಂದೂರು ಮತ್ತು ಹಾರನಹಳ್ಳಿ ಗ್ರಾಮಗಳಲ್ಲಿ ಸರ್ಕಾರಿ ಜಾಗ ಗುರುತಿಸಿ ಮಾರುಕಟ್ಟೆ ಯಾರ್ಡ್ ಹಾಗೂ ಗೋದಾಮು ನಿರ್ಮಾಣದ ಬಗ್ಗೆ ಪರಿಶೀಲನೆ ನಡೆಸುವಂತೆ ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದರು. ಜೊತೆಗೆ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮವಹಿಸಲು ಹಾಗೂ ಹಾಸ್ಟೆಲ್, ಅಂಗನವಾಡಿ, ಆಸ್ಪತ್ರೆಗಳಲ್ಲಿ ಕೊರತೆ ಆಗದಂತೆ ಎಚ್ಚರಿಕೆ ವಹಿಸಲು ಹೇಳಿದರು.

ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಸಬ್ಸಿಡಿ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಮೊದಲು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ತಿಳಿಸಿದರು. ರೇಷ್ಮೆ ಬೆಳೆ ಉತ್ತೇಜನಕ್ಕಾಗಿ ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ಮೊರಾರ್ಜಿ ವಿದ್ಯಾರ್ಥಿ ನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳ ನೋಂದಣಿ ಹೆಚ್ಚಾಗಿದೆ ಎಂದು ತಿಳಿಸಿದರು. 22 ಅಂಬೇಡ್ಕರ್ ಭವನಗಳಿಗೆ ಜಾಗ ದೊರೆತಿದ್ದು, ಹೊಸದಾಗಿ 12 ಅಂಬೇಡ್ಕರ್ ಹಾಗೂ 10 ಬಾಬು ಜಗಜೀವನ ಭವನಗಳಿಗೆ ಅನುಮೋದನೆ ಸಿಕ್ಕಿದೆ ಎಂದು ಹೇಳಿದರು. ಗಿರಿಜನ ಹಳ್ಳಿಗಳಲ್ಲಿ ಹಕ್ಕುಪತ್ರ ವಿತರಣೆಯಲ್ಲಿ ವಿಳಂಬವಾಗಿರುವುದರಿಂದ ಸವಲತ್ತು ಪಡೆಯಲು ತೊಂದರೆ ಆಗುತ್ತಿದೆ ಎಂದರು.

ಪಶುಪಾಲನಾ ಇಲಾಖೆ ಅಧಿಕಾರಿ ಸೋಮಯ್ಯ, ಜಾನುವಾರುಗಳಿಗೆ ಲಸಿಕೆ ನೀಡಲಾಗಿದ್ದು, ಶೇ.50 ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದ್ದು, ಸರ್ಕಾರಿ ಶಾಲೆಗಳ ದಾಖಲಾತಿ ಅಭಿಯಾನ ಆರಂಭಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ಮಾಹಿತಿಯೊಂದಿಗೆ ಮರುಹಾಜರಾಗುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತಾಧಿಕಾರಿ ನಂದನ್, ತಹಸೀಲ್ದಾರ್ ನಿಸರ್ಗಪ್ರಿಯಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಸುನೀಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share