Saturday, September 19, 2026
Join WhatsApp Group
HomeLocal Newsಕೊಂಕಣ ರೈಲ್ವೆ ಅಭಿವೃದ್ಧಿಗೆ 7,760 ಕೋಟಿ ರೂ ವಿಶೇಷ ಅನುದಾನ!

ಕೊಂಕಣ ರೈಲ್ವೆ ಅಭಿವೃದ್ಧಿಗೆ 7,760 ಕೋಟಿ ರೂ ವಿಶೇಷ ಅನುದಾನ!

ಕಾರವಾರ: ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ರೈಲು ಸಂಪರ್ಕ ಕೊಂಡಿಯಾಗಿರುವ ಕೊಂಕಣ ರೈಲ್ವೆಯ ಸಮಗ್ರ ಅಭಿವೃದ್ಧಿಗೆ 7,760 ಕೋಟಿ ರೂ ವಿಶೇಷ ಅನುದಾನಕ್ಕೆ ಕೇಂದ್ರ ಸಚಿವ ಸಂಪುಟದ ಅಂತಿಮ ಅನುಮೋದನೆ ದೊರೆತಿರುವುದಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ನಿರ್ಧಾರದಿಂದ ಕೊಂಕಣ ರೈಲ್ವೆ ವ್ಯಾಪ್ತಿಯ ಮೂಲಸೌಕರ್ಯ ಮತ್ತಷ್ಟು ಬಲಗೊಳ್ಳಲಿದ್ದು, ಪ್ರಯಾಣಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಇದರೊಂದಿಗೆ ಕರಾವಳಿ ಭಾಗದ ವಾಣಿಜ್ಯ ಚಟುವಟಿಕೆ, ಆರ್ಥಿಕ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಗೇರಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದನೆ ದೊರೆತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ. ಈ ಮಹತ್ವದ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆ ಮತ್ತು ಧನ್ಯವಾದ ಸಲ್ಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕಾಗೇರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಉತ್ತರ ಕನ್ನಡ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ರೈಲ್ವೆ ಬೇಡಿಕೆಗಳು ಹಾಗೂ ಬಾಕಿ ಇರುವ ಯೋಜನೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.

ತಾಳಗುಪ್ಪ–ಹುಬ್ಬಳ್ಳಿ ರೈಲ್ವೆ ಯೋಜನೆಗೆ ಕಾಮಗಾರಿಯ ವೇಗ ಹೆಚ್ಚಿಸುವುದು, ಅಂಕೋಲಾ–ಹುಬ್ಬಳ್ಳಿ, ತಾಳಗುಪ್ಪ–ಹೊನ್ನಾವರ ಹಾಗೂ ಧಾರವಾಡ–ಕಿತ್ತೂರು–ಬೆಳಗಾವಿ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಗಿದೆ. ಇದರ ಜೊತೆಗೆ ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಸ್ತುತ ಸಂಚರಿಸುತ್ತಿರುವ ಆಯ್ದ ಪ್ರಮುಖ ರೈಲುಗಳ ಮಾರ್ಗ ವಿಸ್ತರಣೆಗೂ ಕಾಗೇರಿ ಮನವಿ ಮಾಡಿದ್ದಾರೆ.

ಖಾನಾಪುರ ರೈಲ್ವೆ ನಿಲ್ದಾಣವನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸೇರ್ಪಡೆಗೊಳಿಸಿ ಆಧುನಿಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸುವುದು ಹಾಗೂ ಖಾನಾಪುರದಲ್ಲಿ ಪ್ರಮುಖ ರೈಲುಗಳಿಗೆ ನಿಲುಗಡೆ ನೀಡುವಂತೆ ಕೂಡ ಮನವಿ ಸಲ್ಲಿಸಲಾಗಿದೆ.

ತಮ್ಮ ಮನವಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪ್ರಸ್ತಾಪಿಸಲಾದ ಯೋಜನೆಗಳು ಹಾಗೂ ಬೇಡಿಕೆಗಳ ಕುರಿತು ಅಧಿಕಾರಿಗಳ ಮಟ್ಟದಲ್ಲಿ ತ್ವರಿತ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕಾಗೇರಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share