ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಕುಮಟಾ ತಾಲೂಕಿನ ಬರ್ಗಿಯಲ್ಲಿ ಸಂಭವಿಸಿದೆ.
ಮೃತರನ್ನು ಕುಮಟಾದ ಶಶಿಹಿತ್ಲು ನಿವಾಸಿ ದುರ್ಗಿ ಹರಿಕಾಂತ (70) ಎಂದು ಗುರುತಿಸಲಾಗಿದೆ.
ದುರ್ಗಿ ಹರಿಕಾಂತ ಅವರು ಬರ್ಗಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಲು ಬಂದಿದ್ದರು. ಬಸ್‌ನಿಂದ ಇಳಿದ ಬಳಿಕ ಬರ್ಗಿ ಸರಕಾರಿ ಪ್ರೌಢಶಾಲೆ ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ, ಕುಮಟಾ ಕಡೆಯಿಂದ ಗೋಕರ್ಣದತ್ತ ತೆರಳುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ದುರ್ಗಿ ಹರಿಕಾಂತ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರು ಸಿದ್ದಾಪುರದಿಂದ ಗೋಕರ್ಣದತ್ತ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಗೋಕರ್ಣ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನಗಳ ವೇಗ ಹಾಗೂ ಪಾದಚಾರಿಗಳ ರಸ್ತೆ ದಾಟುವಿಕೆ ಮತ್ತೊಮ್ಮೆ ಆತಂಕಕ್ಕೆ ಕಾರಣವಾಗಿದ್ದು, ಬರ್ಗಿ ಭಾಗದಲ್ಲಿ ಸುರಕ್ಷಿತ ರಸ್ತೆ ದಾಟುವ ವ್ಯವಸ್ಥೆ ಕಲ್ಪಿಸುವ ಅಗತ್ಯವೂ ಸಾರ್ವಜನಿಕರಿಂದ ಕೇಳಿಬರುತ್ತಿದೆ.